ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಗಾಂಧಿ ಸ್ಮೃತಿ ಬೃಹತ್ ಜನಜಾಗೃತಿ ಸಮಾವೇಶ ಮತ್ತು ವ್ಯಸನಮುಕ್ತರಿಗೆ ಅಭಿನಂದನಾ ಸಮಾರಂಭ ನಡೆಯಿತು.

ಕೊಪ್ಪಳ: ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಸಾಮಾಜಿಕ ಸಾಮರಸ್ಯ ಬೆಳೆಸುವ ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪಳ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ್ ಹೇಳಿದರು.

ನಗರದ ಸಾಹಿತ್ಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಗಾಂಧಿ ಸ್ಮೃತಿ ಬೃಹತ್ ಜನಜಾಗೃತಿ ಸಮಾವೇಶ ಮತ್ತು ವ್ಯಸನಮುಕ್ತರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿ ಕಂಡ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಜಾತಿ ಭೇದವಿಲ್ಲದೆ ಎಲ್ಲರೂ ಒಂದೇ ಎಂಬ ಆಶಯದೊಂದಿಗೆ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿದ್ದಾರೆ. ಸಮಾಜದ ಪ್ರಗತಿಯಲ್ಲಿ ಸಾಕ್ಷರತೆ ಹಾಗೂ ಜನಜಾಗೃತಿಯ ಪಾತ್ರ ಮಹತ್ವದ್ದಾಗಿದೆ ಎಂದರು.

ಸಮಾಜದ ಏಳಿಗೆಯೇ ಧ್ಯೇಯ: ಸಾನ್ನಿಧ್ಯ ವಹಿಸಿದ್ದ ಶ್ರೀ ಮಹಾದೇವ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬುದ್ಧರನ್ನು ನೇರವಾಗಿ ನೋಡಲು ಸಾಧ್ಯವಾಗದಿದ್ದರೂ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು. ಅಂತಹ ಮಹನೀಯರ ಗುಣ ಮತ್ತು ಚಿಂತನೆಗಳನ್ನು ಡಾ. ವೀರೇಂದ್ರ ಹೆಗ್ಗಡೆ ಅವರ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಕಾಣಬಹುದು ಎಂದರು.

ಧರ್ಮಸ್ಥಳದ ಸೇವೆ ಕೇವಲ ಧಾರ್ಮಿಕ ಚಟುವಟಿಕೆಗೆ ಸೀಮಿತವಾಗಿಲ್ಲ. ಸಮಾಜದ ಸರ್ವಾಂಗೀಣ ಏಳಿಗೆಯನ್ನು ಗುರಿಯಾಗಿಸಿಕೊಂಡು ವಿವಿಧ ಜನಪರ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನೀಲಕಂಠಪ್ಪ ನಾಗಶೆಟ್ಟಿ, ಹಿರಿಯ ವಕೀಲ ರಾಘವೇಂದ್ರ ಪಾನಗಂಟಿ, ಶಶಿಧರ, ಗಣೇಶ ನಾಯಕ, ನಿರಂಜನ, ರಾಜೇಶ ಪಾಲ್ಗೊಂಡಿದ್ದರು. ಸುಮಾರು 70 ವ್ಯಸನಮುಕ್ತರನ್ನು ಅಭಿನಂದಿಸಲಾಯಿತು. ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.