ವಿಶ್ವ ಏಡ್ಸ್ ದಿನದ ಅಂಗವಾಗಿ ಜನ ಜಾಗೃತಿ ಜಾಥಾಕ್ಕೆ ಚಾಲನೆ

| Published : Dec 05 2024, 12:33 AM IST

ಸಾರಾಂಶ

ಪ್ರತಿ ವರ್ಷ ವಿಶ್ವ ಏಡ್ಸ್ ದಿನವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತಿದೆ. ಸರಿಯಾದ ಮಾರ್ಗದಲ್ಲಿ ಹಕ್ಕುಗಳನ್ನು ಪಡೆಯೋಣ: ನನ್ನ ಆರೋಗ್ಯ ನನ್ನ ಹಕ್ಕು ಎಂಬ ಘೋಷವಾಕ್ಯದಡಿಯಲ್ಲಿ ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಏಡ್ಸ್ ರೋಗದ ತಡೆಗಟ್ಟುವುದು ಕೇವಲ ಅಧಿಕಾರಿಗಳ ಜವಾಬ್ದಾರಿ ಮಾತ್ರವಲ್ಲ. ಪ್ರತಿಯೊಬ್ಬರ ನಾಗರೀಕರ ಜವಾಬ್ದಾರಿಯಾಗಿದೆ. ಇದಕ್ಕೆ ಸಾರ್ವಜನಿಕರು ಕೈ ಜೋಡಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ವಿಶ್ವ ಏಡ್ಸ್ ದಿನದ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಜನ ಜಾಗೃತಿ ಜಾಥಾಗೆ ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ ಜಾಥಾಗೆ ಚಾಲನೆ ನೀಡಿದರು.

ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋದಕ ಆಸ್ಪತ್ರೆ, ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಆಶ್ರಯದಲ್ಲಿ ನಡೆದ ಜಾಥಾ ನಡೆಯಿತು.

ನಂತರ ಜಾಥಾವು ಮಂಡ್ಯದ ಜಯಚಾಮರಾಜ ಒಡೆಯರ್ ವೃತ್ತದಿಂದ ಹೊರಟು ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಸಮಾವೇಶಗೊಂಡಿತು. ತದನಂತರ ಡಿಎಚ್‌ಒ ಡಾ.ಮೋಹನ್ ವಿಶ್ವ ಏಡ್ಸ್ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.

ಇದಕ್ಕೂ ಮುನ್ನ ಜಾಥಾಗೆ ಚಾಲನೆ ನೀಡಿ ಮಾತನಾಡಿದ ನಗರಸಭೆ ಅಧ್ಯಕ್ಷ ಪ್ರಕಾಶ್ , ಪ್ರತಿ ವರ್ಷ ವಿಶ್ವ ಏಡ್ಸ್ ದಿನವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತಿದೆ. ಸರಿಯಾದ ಮಾರ್ಗದಲ್ಲಿ ಹಕ್ಕುಗಳನ್ನು ಪಡೆಯೋಣ: ನನ್ನ ಆರೋಗ್ಯ ನನ್ನ ಹಕ್ಕು ಎಂಬ ಘೋಷವಾಕ್ಯದಡಿಯಲ್ಲಿ ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ನಗರಸಭೆ ಉಪಾಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಏಡ್ಸ್ ರೋಗದ ತಡೆಗಟ್ಟುವುದು ಕೇವಲ ಅಧಿಕಾರಿಗಳ ಜವಾಬ್ದಾರಿ ಮಾತ್ರವಲ್ಲ. ಪ್ರತಿಯೊಬ್ಬರ ನಾಗರೀಕರ ಜವಾಬ್ದಾರಿಯಾಗಿದೆ. ಇದಕ್ಕೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕಾರಾಗೃಹದ ಅಧೀಕ್ಷಕ ಟಿ.ಕೆ.ಲೋಕೇಶ್ ಮಾತನಾಡಿ, ಎಚ್ಐವಿ ಸೋಂಕಿತರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡುತ್ತಿದ್ದು, ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಸೋಂಕಿತರಿಗೆ ಸಾರ್ವಜನಿಕರು ಆತ್ಮಸ್ಥೈರ್ಯ ತುಂಬಿ ಅವರ ಜೀವಿತಾವಧಿಯನ್ನು ಹೆಚ್ಚು ಮಾಡವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್.ಆಶಾಲತಾ ಮಾತನಾಡಿ, ಜನರಿಗೆ ಎಚ್ಐವಿ ಏಡ್ಸ್ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಎಚ್ಐವಿ ಸೋಂಕಿನಿಂದ ಬಳಲುತ್ತಿರುವವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯವನ್ನು ಒದಗಿಸುವವ ಬಗ್ಗೆ ತಿಳಿಸಿದರು.

ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ, ನಿವೃತ್ತ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕೆ.ಜಿ.ಭವಾನಿಶಂಕರ್ ಸೇರಿದಂತೆ ಇನ್ನಿತರರು ಹಾಜರಿದ್ದರು.