ಪುತ್ತೂರು : ಮಹಾತ್ಮರ ಜಯಂತಿಯನ್ನು ಆಚರಿಸುವ ಮೂಲಕ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕೃತಿಯ ಮೂಲಕ ಜಗತ್ತಿಗೆ ಹಿಂದೂ ಸನಾತನ ಧರ್ಮದ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ ಎಂದು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷ ಪ್ರಮೋದ್ ಕುಮಾರ್ ಹೇಳಿದರು. ಅವರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆಯ ಜಂಟಿ ಆಶ್ರಯದಲ್ಲಿ ಸೋಮವಾರ ಪುತ್ತೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಂಸ್ಮರಣಾ ದೀಪ ಬೆಳಗಿಸಿ ಮಾತನಾಡಿದರು.

ಜೀವನದಲ್ಲಿ ಒಳ್ಳೆತನವನ್ನು ಪೋಷಿಸಬೇಕು. ಯೋಚನಾ ಶೈಲಿಯನ್ನು ಬದಲಾಯಿಸಿಕೊಳ್ಳುವ ಮುಖಾಂತರ ಸಮಾಜ, ದೇಶಕ್ಕೆ ಕೊಡುಗೆ ನೀಡಬೇಕು ಎಂದು ಹೇಳಿದರು.ಸಂಸ್ಮರಣಾ ಉಪನ್ಯಾಸ ನೀಡಿದ ಮುಖ್ಯ ಶಿಕ್ಷಕಿ ಶಂಕರಿ ಪಟ್ಟೆ ಮಾತನಾಡಿ ಮಹರ್ಷಿ ವಾಲ್ಮೀಕಿ ಜೀವನ ಮೌಲ್ಯ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರದೆ, ಜಗತ್ತಿಗೆ ಅನ್ವಯ ಎಂದರು.ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ, ತಹಸೀಲ್ದಾರ್ ಎಸ್.ಬಿ ಕೂಡಲಗಿ ಅಧ್ಯಕ್ಷತೆ ವಹಿಸಿದ್ದರು. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಾಲ್ಮೀಕಿ ಹಾಗೂ ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಾದ ಆರಾಧನ ನಾಯ್ಕ, ಧೀರಜ್, ಮಾನಸ, ದಿಶ ಆರ್. ಅವರನ್ನು ಸನ್ಮಾನಿಸಲಾಯಿತು. ಸಂಸ್ಮರಣಾ ಉಪನ್ಯಾಸ ನೀಡಿದ ಶಂಕರಿ ಪಟ್ಟೆ ಅವರನ್ನು ಗೌರವಸಲಾಯಿತು.ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಹರಿಪ್ರಸಾದ್ ಇದ್ದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುನೀತಾ ಕುಮಾರಿ ಸ್ವಾಗತಿಸಿದರು. ವಸತಿ ಶಾಲಾ ಶಿಕ್ಷಕಿ ಲಕ್ಷ್ಮೀ ಸನ್ಮಾನಿತರ ಪರಿಚಯ ಮಾಡಿದರು. ಸಂಧಾ ವಂದಿಸಿದರು. ಕೊಣಾಲು ವಸತಿ ನಿಲಯದ ಮೇಲ್ವಿಚಾರಕಿ ಸವಿತಾ ನಿರೂಪಿಸಿದರು.