ಡೆಂಘೀ ತಡೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ

| Published : May 16 2025, 02:07 AM IST

ಸಾರಾಂಶ

ಡೆಂಘೀ ರೋಗಿಗಳ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 10 ಹಾಸಿಗೆ ಹಾಗೂ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 5 ಹಾಸಿಗೆ ಮೀಸಲಾಗಿಡಲಾಗಿರುತ್ತದೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಡೆಂಘೀ ತಡೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಪ್ರತಿ ವರ್ಷದಂತೆ ಮೇ 16ರಂದು ಆಚರಿಸಲಾಗುವ ರಾಷ್ಟ್ರೀಯ ಡೆಂಘೀ ದಿನಾಚರಣೆಯನ್ನು ತಪಾಸಣೆ, ಸ್ವಚ್ಛತೆ, ನಿಯಂತ್ರಣ, ಎಂಬ ಘೋಷ ವಾಕ್ಯದೊಂದಿಗೆ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಡೆಂಘೀ ನಿಯಂತ್ರಣ ದಿನಾಚರಣೆ ಹಾಗೂ ಡೆಂಘೀ ನಿಯಂತ್ರಣ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಡೆಂಘೀ ರೋಗಿಗಳ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 10 ಹಾಸಿಗೆ ಹಾಗೂ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 5 ಹಾಸಿಗೆ ಮೀಸಲಾಗಿಡಲಾಗಿರುತ್ತದೆ. ಅಲ್ಲದೇ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ರೋಗಕ್ಕೆ ಸಂಬಂಧಿಸಿದ ಔಷಧ ದಾಸ್ತಾನು ಲಭ್ಯವಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪಟ್ಟಣ ಪ್ರದೇಶಗಳಲ್ಲಿ ಸ್ವಯಂ ಸೇವಕರಿಂದ ಪ್ರತಿ ಶುಕ್ರವಾರ ಲಾರ್ವಾ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು. ಖಾಲಿ ಜಾಗಗಳ ಮತ್ತು ಕಟ್ಟಡ ಕಾಮಗಾರಿಗಳ ನೀರು ಸಂಗ್ರಹಣ ತಾಣಗಳಲ್ಲಿ ಸೊಳ್ಳೆ ಮರಿ (ಲಾರ್ವಾ) ಕಂಡು ಬಂದರೆ ಸಂಬಂಧಿಸಿದ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಿ ನೀರಿನ ತಾಣಗಳನ್ನು ಸ್ವಚ್ಛಗೊಳಿಸುವಂತೆ ಸೂಚಿಸಲಾಗುತ್ತದೆ. ಒಂದು ವೇಳೆ ನೋಟಿಸ್‌ಗೆ ಸರಿಯಾಗಿ ಸ್ಪಂದಿಸದೇ ಇದ್ದ ಪಕ್ಷದಲ್ಲಿ ಅಂತಹ ಕಟ್ಟಡ ಮಾಲೀಕರಿಗೆ ದಂಡ ವಿಧಿಸಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ಕೈ ಜೋಡಿಸಿ ಲಾರ್ವಾ ನಿರ್ಮೂಲನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಜೂನ್ ತಿಂಗಳಿನಲ್ಲಿ ಶಾಲೆಗಳು ಪುನಃ ಪ್ರಾರಂಭವಾಗುತ್ತಿವೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕೀಟಜನ್ಯ ರೋಗದ ಬಗ್ಗೆ ತಿಳುವಳಿಕೆ ನೀಡುವುದರ ಜೊತೆಗೆ ಶಾಲಾ ಕಾಲೇಜುಗಳ ಸುತ್ತಮುತ್ತಲಿನ ಆವರಣ ಸ್ವಚ್ಛವಾಗಿಟ್ಟು ಕೊಳ್ಳುವಂತೆ ತಿಳುವಳಿಕೆ ನೀಡಬೇಕು. ಪೌರಕಾರ್ಮಿಕರಿಗೆ ಡೆಂಘೀ ರೋಗದ ಬಗ್ಗೆ ಹಾಗೂ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರ ನಿತ್ಯ ಸ್ವಚ್ಛವಾಗಿಟ್ಟುಕೊಳ್ಳುವಂತೆ ಹಾಗೂ ಮನೆಯ ಒಳಾಂಗಣ ಹಾಗೂ ಹೊರಾಂಗಣದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ, ತೆಂಗಿನಕಾಯಿ, ಪ್ಲಾಸ್ಟಿಕ್ ಕಪ್ ಅಥವಾ ಇತರೆ ಪಾತ್ರೆಗಳಲ್ಲೂ ನೀರು ಶೇಖರಣೆಯಾಗದಂತೆ ನೋಡಿಕೊಳ್ಳುವ ಕುರಿತು, ಟ್ಯಾಂಕ್‌ಗಳು ಮತ್ತು ನೀರಿನ ಸಂಗ್ರಹಣಾ ಭಂಡಾರಗಳನ್ನು ಸರಿಯಾಗಿ ಮುಚ್ಚಿ, ನಿಯಮಿತವಾಗಿ ಸ್ವಚ್ಛಗೊಳಿಸುವ ಬಗ್ಗೆ ಜನ ಜಾಗೃತಿ ಮೂಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ ಸೇರಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.