ಹವಾಮಾನ ಇಲಾಖೆ ಮುನ್ಸೂಚನೆ ತಿಳಿವಳಿಕೆ ಸಾರ್ವಜನಿಕರಿಗೆ ಅಗತ್ಯ: ಡಾ.ಪರಮೇಶ

| Published : Jan 03 2025, 12:33 AM IST

ಸಾರಾಂಶ

ಹವಾಮಾನ ಇಲಾಖೆ ಕಾಲ ಕಾಲಕ್ಕೆ ಹೊರಡಿಸುವ ಮುನ್ಸೂಚನೆ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿದಲ್ಲಿ ಪ್ರಾಕೃತಿಕ ವಿಕೋಪ ತಡೆಯಬಹುದಾಗಿದೆ ಎಂದು ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕ ಡಾ.ಪರಮೇಶ ಜೆ.ಆರ್. ಮಾಹಿತಿ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಹವಾಮಾನ ಇಲಾಖೆ ಕಾಲ ಕಾಲಕ್ಕೆ ಹೊರಡಿಸುವ ಮುನ್ಸೂಚನೆ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿದಲ್ಲಿ ಪ್ರಾಕೃತಿಕ ವಿಕೋಪ ತಡೆಯಬಹುದಾಗಿದೆ ಎಂದು ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕ ಡಾ.ಪರಮೇಶ ಜೆ.ಆರ್. ಮಾಹಿತಿ ನೀಡಿದ್ದಾರೆ.

ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಗುರುವಾರ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಸ್ಥಳೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನಿಯೋಜನೆ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಜೊತೆ ಸಮನ್ವಯತೆ ಸಾಧಿಸುವುದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿ, ಮಾಹಿತಿ ಹಂಚಿಕೊಳ್ಳುವುದು, ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚು ಹೆಚ್ಚು ಮಾಹಿತಿ ವಿನಿಮಯ ಮಾಡಿಕೊಳ್ಳುವುದು. ಹೀಗೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

ಕಂದಾಯ, ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಸೆಸ್ಕ್, ಅರಣ್ಯ, ಪಂಚಾಯತ್ ರಾಜ್, ಲೋಕೋಪಯೋಗಿ, ಪೌರಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹೀಗೆ ಪ್ರತಿಯೊಂದು ಇಲಾಖೆಯೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ವಿಕೋಪ ತಡೆದು ಹಲವು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬಹುದು ಎಂದು ಡಾ.ಪರಮೇಶ ಹೇಳಿದರು.

ಪ್ರಕೃತಿ ವಿಕೋಪ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆಯಾಗಿ ಮಾಹಿತಿ ನೀಡುವುದು, ಅರಿವು ಕಾರ್ಯಕ್ರಮ, ತೆರವುಗೊಳಿಸುವಿಕೆ ಮತ್ತಿತರ ಕ್ರಮ ಕೈಗೊಳ್ಳುವುದು, ಸೆಸ್ಕ್ ವಿಭಾಗದ ಮೂಲಕ ವಿದ್ಯುತ್ ಉಪಕರಣಗಳನ್ನು ವಿಕೋಪದ ಸಂದರ್ಭ ಸೂಕ್ತವಾಗಿ ನಿರ್ವಹಿಸಲು ಸೂಚಿಸಿ ಕ್ರಮಕೈಗೊಳ್ಳುವುದು ಅಗತ್ಯ ಎಂದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರ ಗುರುತಿಸುವುದು, ವಿಕೋಪ ಪೀಡಿತ ಪ್ರದೇಶಗಳಲ್ಲಿ ಲಭ್ಯವಿರಬೇಕಾದ ಔಷಧ, ಚಿಕಿತ್ಸಾ ಉಪಕರಣಗಳ ಕುರಿತಂತೆ ಅಗತ್ಯ ಕ್ರಮ ವಹಿಸುವುದು, ಮಳೆಗಾಲದಲ್ಲಿನ ಸಮಸ್ಯೆಯಾದ ಸಾಂಕ್ರಾಮಿಕ ರೋಗ ನಿರ್ವಹಣೆಗೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಲಭ್ಯವಿರುವಂತೆ ಆರೋಗ್ಯ ಇಲಾಖೆಯಿಂದ ಕ್ರಮವಹಿಸುವುದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಸುವುದು, ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಭೂವಿಜ್ಞಾನಿಗಳು ಭೂಕುಸಿತ ಪೀಡಿತ ಪ್ರದೇಶಗಳ ಬಗ್ಗೆ ಅಧ್ಯಯನ ನಡೆಸುವುದು, ಹೀಗೆ ಹಲವು ಮುನ್ನೆಚ್ಚರ ಕ್ರಮ ಕೈಗೊಳ್ಳಬೇಕಿದೆ ಎಂದು ಪರಮೇಶ ಮಾಹಿತಿ ನೀಡಿದರು.

ಜಿಲ್ಲಾ ವಿಕೋಪ ನಿರ್ವಹಣಾ ಪರಿಣಿತ ಅನನ್ಯ ವಾಸುದೇವ ಮಾಹಿತಿ ನೀಡಿ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಹಲವು ಸವಾಲುಗಳನ್ನು ಎದುರಿಸಬೇಕಿದೆ. ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದರು.

ಜಿಲ್ಲಾ ಆಡಳಿತ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಬಿ.ಮಾದಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.