ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಪ್ರಜಾ ಸೇವಾ ಶಾಖೆಗೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಾರಂಭಿಸಿರುವ ಪ್ರಜಾಸೇವಾ ಯೋಜನೆಯು ಅತ್ಯಂತ ಮಹತ್ವಾಕಾಂಕ್ಷೆಯದ್ದಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಪ್ರಜಾ ಸೇವಾ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಆಶಯದಂತೆ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಅತ್ಯಂತ ಪರಿಣಾಮಕಾರಿ ಹಾಗೂ ವೇಗವಾಗಿ ತಲುಪಿಸಲು ಈ ವ್ಯವಸ್ಥೆ ರೂಪಿಸಲಾಗಿದೆ. ತಾಲೂಕು ಮತ್ತು ಜಿಲ್ಲಾ ಮಟ್ಟದ ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಜನರಿಗೆ ಶೀಘ್ರ ಪರಿಹಾರ ಸಿಗುವಂತಾಗಬೇಕು ಎಂದು ಹೇಳಿದರು.

ಈ ಹಿಂದೆ ಇದ್ದ ಗ್ರಾಮಫೋನ್ ಮಾದರಿಯ ವ್ಯವಸ್ಥೆಯನ್ನು ಈಗ ಇನ್ನಷ್ಟು ಪರಿಣಾಮಕಾರಿಯಾಗಿ ಮಾರ್ಪಡಿಸಿ ಪ್ರಜಾ ಸೇವಾ ಹೆಸರಿನಲ್ಲಿ ಜಾರಿಗೆ ತರಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯಿತಿ, ತಾಲೂಕು ಮಟ್ಟದ ಕಚೇರಿಗಳು ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ಸಾರ್ವಜನಿಕ ಸೇವೆಯ ಪ್ರತಿಯೊಂದು ಇಲಾಖೆಯಲ್ಲೂ ಈ ಪ್ರಜಾ ಸೇವಾ ವ್ಯವಸ್ಥೆ ಕಾರ್ಯನಿರ್ವಹಿಸಲಿದೆ ಎಂದು ಸಚಿವರು ವಿವರಿಸಿದರು.

ಪ್ರಜಾಸೇವಾ ಶಾಖೆಯು ಕೇವಲ ಅರ್ಜಿಗಳನ್ನು ಪಡೆದುಕೊಂಡು ಫೈಲ್ ಮಾಡಲು ಅಥವಾ ಆನ್‍ಲೈನ್‍ನಲ್ಲಿ ನಮೂದಿಸಿ ಸುಮ್ಮನಿರಲು ಸೀಮಿತವಾಗಿಲ್ಲ. ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಕುಂದುಕೊರತೆ ಮತ್ತು ಸಮಸ್ಯೆಗೂ ಪೂರ್ಣ ಪ್ರಮಾಣದ ಪರಿಹಾರ ಸಿಗಲೇಬೇಕು. ಸಾರ್ವಜನಿಕರ ಅರ್ಜಿಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ, ನಿಗದಿತ ಕಾಲಮಿತಿಯಲ್ಲಿ ಪರಿಹರಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಮಾತನಾಡಿ, ನೇರವಾಗಿ ಜನರಿಗೆ ಸೇವೆಗಳನ್ನು ತಲುಪಿಸುವ ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯಿತಿಗಳು ಪಂಚಾಯತ್ ರಾಜ್ ವ್ಯವಸ್ಥೆಯ ತಳಹಂತದಲ್ಲಿ ಕಾರ್ಯನಿರ್ವಹಿಸುತ್ತಿವೆ. ಪ್ರಜಾ ಸೇವಾ ಶಾಖೆಯ ಮೂಲಕ ಸೇವೆಗಳನ್ನು ಸುಗಮವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಫೋನ್ ಗ್ರಾಮೀಣ ಉಚಿತ ಸಹಾಯವಾಣಿಯನ್ನು ಬಳಸಿಕೊಳ್ಳಲಾಗುವುದು ಎಂದರು.

ಈ ಉಚಿತ ಸಹಾಯವಾಣಿ ಸಂಖ್ಯೆ 1800-425-1978 ಆಗಿದೆ. ಕಳೆದ ಸಾಲಿನ ನವೆಂಬರ್ ನಿಂದ ಕಾರ್ಯಾರಂಭಿಸಿದ್ದು, ಕೆಲವೇ ತಿಂಗಳುಗಳಲ್ಲಿ ಜಿಲ್ಲೆಯ ಗ್ರಾಮೀಣ ಜನತೆ ಈ ಉಚಿತ ಸಹಾಯವಾಣಿ ಮೂಲಕ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಒಟ್ಟು 2747 ಕರೆಗಳ ಮೂಲಕ ದಾಖಲಿಸಿರುತ್ತಾರೆ ಎಂದು ಮಾಹಿತಿ ನೀಡಿದರು.

ಪ್ರಜಾಸೇವಾ ಶಾಖೆಯ ಉಚಿತ ಸಹಾಯವಾಣಿ ಗ್ರಾಮಫೋನ್ ಕಾರ್ಯಾಚರಣೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಕೆಲವು ಆಡಳಿತಾತ್ಮಕ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಪ್ರತಿ ತಾಲ್ಲೂಕಿನಲ್ಲಿ ಒಬ್ಬ ನೋಡಲ್ ಅಧಿಕಾರಿ ಈ ಕರೆಗಳ ಮೂಲಕ ದಾಖಲಿಸಲಾದ ವಿಷಯಗಳ ಕುರಿತು ಅನುಪಾಲನೆ ಕ್ರಮಕೈಗೊಳ್ಳಲಿದ್ದಾರೆ. ಈ ದೂರುಗಳನ್ನು ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಾಗಿನ್‍ಗೆ ನೋಡಲ್ ಅಧಿಕಾರಿ ರವಾನಿಸಲಿದ್ದಾರೆ ಎಂದರು.

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಅಮರನಾಥ್ ಜೈನ್ ಇದ್ದರು.