ಪ್ರಜಾಸೇವಾ ಆಂದೋಲನ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ. ಸೇವೆಯೇ ಪರಮಧರ್ಮ, ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ದೊರಕುವ ಅಪೂರ್ವ ಅವಕಾಶ, ಪ್ರಜೆಗಳ ಸೇವೆಯನ್ನು ಪರಮಾತ್ಮನ ಸೇವೆ ಎನ್ನುವ ಭಾವನೆಯಿಂದ ಕೆಲಸ ಮಾಡಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಉಡುಪಿ : ಪ್ರಜಾಸೇವಾ ಆಂದೋಲನ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ. ಸೇವೆಯೇ ಪರಮಧರ್ಮ, ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ದೊರಕುವ ಅಪೂರ್ವ ಅವಕಾಶ, ಪ್ರಜೆಗಳ ಸೇವೆಯನ್ನು ಪರಮಾತ್ಮನ ಸೇವೆ ಎನ್ನುವ ಭಾವನೆಯಿಂದ ಕೆಲಸ ಮಾಡಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಅವರು ಪ್ರಜಾ ಸೇವೆ ಇಲಾಖೆಯಿಂದ ಕಾಪು ತಾಲೂಕು ಆಡಳಿತ ಸಹಯೋಗದಲ್ಲಿ ಮಜೂರು ಗ್ರಾಪಂ ಸಭಾಭವನದಲ್ಲಿ ನಡೆದ ಪ್ರಜಾ ಸೇವಾ ಆಂದೋಲನ ಸಭೆ ಯನ್ನು ಉದ್ಘಾಟಿಸಿ ಮಾತನಾಡಿದರು.ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದಾಗ ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ ಆಂದೋಲನ ಸಭೆಗಳನ್ನು 1ನೇ ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ 2ನೇ ಮತ್ತು 4ನೇ ಶನಿವಾರ ಶಾಸಕರ ಹಾಗೂ ಎಲ್ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಗುವುದು ಎಂದರು

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಪು ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ತಹಶೀಲ್ದಾರ್ ಅನಂತ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

ಸಭೆಯಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 76 ಅರ್ಜಿಗಳು ಸಲ್ಲಿಕೆಯಾಗಿದ್ದು ಸ್ಥಳದಲ್ಲಿಯೇ ಅವುಗಳನ್ನು ವಿಲೇವಾರಿ ಮಾಡಲಾಯಿತು.

ಕಾಪು ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್ ಸ್ವಾಗತಿಸಿ, ಕಾಪು ಪುರಸಭೆ ಮುಖ್ಯ ಅಧಿಕಾರಿ ನೀಲಕಂಠ ಮೇಸ್ತ ವಂದಿಸಿ, ಪಡು ಕಾಪು ಗ್ರಾಮ ಆಡಳಿತ ಅಧಿಕಾರಿ ಶ್ರೀನಿವಾಸ ಆರ್. ಟಿ. ನಿರೂಪಿಸಿದರು.