ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಆಡಳಿತವನ್ನು ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ‘ಮನೆ ಬಾಗಿಲಿಗೆ ಸರ್ಕಾರ, ಸೇವೆಗೆ ಸಿಗಲಿ ಸಹಕಾರ’ ಎಂಬ ಧ್ಯೇಯದೊಂದಿಗೆ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ರೇಷ್ಮೆ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಆಡಳಿತವನ್ನು ಮನೆ ಬಾಗಿಲಿಗೆ ಕೊಂಡೊಯ್ಯುವ ಉದ್ದೇಶದಿಂದ ‘ಮನೆ ಬಾಗಿಲಿಗೆ ಸರ್ಕಾರ, ಸೇವೆಗೆ ಸಿಗಲಿ ಸಹಕಾರ’ ಎಂಬ ಧ್ಯೇಯದೊಂದಿಗೆ ಪ್ರಜಾಸೇವಾ ಆಂದೋಲನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ರೇಷ್ಮೆ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.ತಾಲೂಕು ಆಡಳಿತ, ತಾಲೂಕು ಪಂಚಾಯತ್ ವತಿಯಿಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ತಾಲೂಕು ಮಟ್ಟದ ಹಾಗೂ ಶಾಸಕರ ನೇತೃತ್ವದಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರ ಹೋಬಳಿ ಮಟ್ಟದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದ. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.ಜನರು ತಮ್ಮ ಕೆಲಸಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಬದಲು ನೇರವಾಗಿ ಅಧಿಕಾರಿಗಳ ಮುಂದೆ ಅರ್ಜಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಸ್ಥಳದಲ್ಲೇ ಇತ್ಯರ್ಥಪಡಿಸಲು ಸಾಧ್ಯವಿರುವ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲಾಗುವುದು. ಹೆಚ್ಚಿನ ಕಾಲಾವಕಾಶ ಅಗತ್ಯವಿರುವ ಅರ್ಜಿಗಳಿಗೆ ಕಾಲಮಿತಿ ನಿಗದಿಪಡಿಸಿ, ಮುಂದಿನ ಕಾರ್ಯಕ್ರಮದ ವೇಳೆಗೆ ಅರ್ಜಿಗಳ ವಿಲೇವಾರಿ ಮಾಡಲಾಗುವುದು. ಅರ್ಜಿಗಳ ಪರಿಹಾರಕ್ಕೆ ವಿಳಂಬವಾದರೆ ಅದಕ್ಕೆ ಕಾರಣವೇನು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಅರ್ಜಿದಾರರಿಗೆ ತಿಳಿಸಲಾಗುವುದು ಎಂದು ತಿಳಿಸಿದರು.
ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಮಾಡಿದರೆ ಅಥವಾ ಸಮರ್ಪಕ ಉತ್ತರ ನೀಡದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಬಳಿಕ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳು ಆದೇಶ ಪತ್ರಗಳನ್ನು ವಿತರಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮೊದಲು ಕೊಳ್ಳೇಗಾಲ ಪಟ್ಟಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವರು ಮಾರ್ಲಾಪಣೆ ಮಾಡಿ ಗೌರವ ಸಲ್ಲಿಸಿದರು. ತಾಲೂಕು ಪಂಚಾಯಿತಿ ಆವರಣದಲ್ಲಿ ವಿವಿಧ ಇಲಾಖೆ ಮಳಿಗೆಗಳನ್ನು ಉದ್ಘಾಟಿಸಿದರು.
ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಶಾಸಕ ಎ.ಆರ್.ಕೃಷ್ಣಮೂರ್ತಿ ಸಮ್ಮುಖದಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ನೋಂದಣಿ ಮಾಡಿಸಿ ಅರ್ಜಿಗಳ ಜತೆ ಸಚಿವರು ಹಾಗೂ ಶಾಸಕರ ಮುಂದೆ ಜನರು ವಿವರವಾಗಿ ತಮ್ಮ ಸಮಸ್ಯೆಗಳನ್ನು ಸಭೆಯ ಮುಂದಿಟ್ಟರು.ಗ್ರಾಮೀಣ ಪ್ರದೇಶಗಳ ವಿದ್ಯುತ್ ಸಮಸ್ಯೆ, ಕೆರೆಗಳ ಒತ್ತುವರಿ ತೆರವು, ಪಟ್ಟಣದ ಕೊಂಗಳ ಕೆರೆಗೆ ಚರಂಡಿ ನೀರು ಸೇರುತ್ತಿರುವ ಬಗ್ಗೆ, ಸ್ಮಶಾನಕ್ಕೆ ಜಾಗ ಮಂಜೂರು, ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವುದು, ಪಟ್ಟಣದ ಗ್ರಂಥಾಲಯಕ್ಕೆ ಹೊಸ ಕಟ್ಟಡ, ಓದುಗರಿಗೆ ಸಮಯ ವಿಸ್ತರಣೆ, ಸಿಸಿ ರಸ್ತೆ, ಮೂಲ ಸೌಕರ್ಯ, ಪಟ್ಟಣದ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅವಕಾಶ ನೀಡಲು ಕೋರಿ, ಬಸ್ ನಿಲ್ದಾಣದಲ್ಲಿ ಸ್ವಚ್ಚತೆ ಇಲ್ಲದಿರುವುದು ಇತರ ಹಲವಾರು ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಸಾರ್ವಜನಿಕರು ಸಚಿವರು ಹಾಗೂ ಶಾಸಕರ ಗಮನಸೆಳೆದು ಪರಿಹಾರಕ್ಕೆ ಮನವಿ ಮಾಡಿದರು.
ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ರಾಜೇಂದ್ರ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ವಿನೋತ್ ಪ್ರಿಯ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಕೃತಿ ಬನ್ಸಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು, ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ನಿರ್ದೇಶಕ ಬಿ.ತೋಟೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ, ಪ್ರಭಾರ ಉಪವಿಭಾಗಾಧಿಕಾರಿ ಸುಬ್ರಹ್ಮಣ್ಯ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶ್ರುತಿ, ತಹಸೀಲ್ದಾರ್ ಬಸವರಾಜು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ್ ಇತರರು ಹಾಜರಿದ್ದರು.