ಕನ್ನಡಪ್ರಭ ವಾರ್ತೆ ಬಾಗಲಕೋಟೆಜನರು ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಗ್ರಾಮದಲ್ಲಿಯೇ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗೆ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ಉಮೇಶ್ ಮೇಟಿ ಹೇಳಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜನರು ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಗ್ರಾಮದಲ್ಲಿಯೇ ಸಂಬಂಧಿಸಿದ ಇಲಾಖೆಗಳ ಸಿಬ್ಬಂದಿಗೆ ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಾಸಕ ಉಮೇಶ್ ಮೇಟಿ ಹೇಳಿದರು.ತಿಮ್ಮಾಪುರ ಗ್ರಾಮದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಪ್ರಜಾಸೇವಾ ಅಭಿಯಾನದಲ್ಲಿ ಮಾತನಾಡಿದ ಅವರು, ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಸ್ಪಂದಿಸಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದೆ. ರಾಂಪುರ ಹಾಗೂ ಬೇವೂರಿನಲ್ಲಿ ನಡೆದ ಹಿಂದಿನ ಹಂತಗಳಲ್ಲಿ 193 ಅರ್ಜಿಗಳು ಸ್ವೀಕೃತವಾಗಿದ್ದು, 159ಕ್ಕೆ ಪರಿಹಾರ ಕಲ್ಪಿಸಲಾಗಿದೆ. ಬಾಕಿ ಇರುವ ಮನವಿಗಳನ್ನೂ ತ್ವರಿತವಾಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಪಂ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ ಮಾತನಾಡಿ, ಗ್ರಾಮೀಣ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸುವ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಅರ್ಹರಿಗೆ ಸರ್ಕಾರಿ ಸೌಲಭ್ಯಗಳು ವಿಳಂಬವಿಲ್ಲದೆ ತಲುಪುವಂತೆ ಸಂಬಂಧಿಸಿದ ಇಲಾಖೆಗಳು ಕ್ರಮ ವಹಿಸಬೇಕು ಎಂದರು.ಆರೋಗ್ಯ ಇಲಾಖೆಯಿಂದ ಫಲಾನುಭವಿಗಳಿಗೆ ತಾಯಿ-ಮಗು ಆರೋಗ್ಯ ಕಿಟ್ಗಳು ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ ಗಳನ್ನು ವಿತರಿಸಲಾಯಿತು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸುಕನ್ಯಾ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪಾಸ್ಬುಕ್ಗಳನ್ನು ನೀಡಲಾಯಿತು. ಇದೇ ವೇಳೆ ಸ್ವಚ್ಛತಾ ಸೇವಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಸೆ.17ರಿಂದ ಅ.2ರವರೆಗೆ ವಿವಿಧ ಗ್ರಾಪಂಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಮೇಟಿ ಮನವಿ ಮಾಡಿದರು.
ಪಿಕೆಪಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಮೇಟಿ, ತಹಶೀಲ್ದಾರ್ ವಾಸುದೇವಸ್ವಾಮಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಎಸ್.ಎನ್. ರಾಂಪುರ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾವಿ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.