ಮಹಾನಗರದಲ್ಲಿ ರಸ್ತೆಗಳಲ್ಲಿ ಬಿದ್ದಿರುವ ತಗ್ಗು-ಗುಂಡಿಗಳನ್ನು ಮುಚ್ಚಿ ದುರಸ್ತಿಗೊಳಿಸುವಂತೆ ಹಲವಾರು ಸಂಘಟನೆಗಳು ಆಡಳಿತ ವ್ಯವಸ್ಥೆ ವಿರುದ್ಧ ಪ್ರತಿಭಟನೆ ಮಾಡಿದ್ದನ್ನು ನಾವು ಕಂಡಿದ್ದೇವೆ, ಆದರೆ, ಭಾನುವಾರ ಕೆಆರ್‌ಎಸ್ ಪಕ್ಷದ ಮುಖಂಡರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಡಳಿತ ವ್ಯವಸ್ಥೆ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಕೆಆರ್‌ಎಸ್‌ ಪಕ್ಷದ ನೇತೃತ್ವದಲ್ಲಿ ಸಾರ್ವಜನಿಕರ ವಿನೂತನ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಮಹಾನಗರದಲ್ಲಿ ರಸ್ತೆಗಳಲ್ಲಿ ಬಿದ್ದಿರುವ ತಗ್ಗು-ಗುಂಡಿಗಳನ್ನು ಮುಚ್ಚಿ ದುರಸ್ತಿಗೊಳಿಸುವಂತೆ ಹಲವಾರು ಸಂಘಟನೆಗಳು ಆಡಳಿತ ವ್ಯವಸ್ಥೆ ವಿರುದ್ಧ ಪ್ರತಿಭಟನೆ ಮಾಡಿದ್ದನ್ನು ನಾವು ಕಂಡಿದ್ದೇವೆ, ಆದರೆ, ಭಾನುವಾರ ಕೆಆರ್‌ಎಸ್ ಪಕ್ಷದ ಮುಖಂಡರು ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಆಡಳಿತ ವ್ಯವಸ್ಥೆ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ನಗರದ ಭಗತ್ ಸಿಂಗ್ ವೃತ್ತ, ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಗೋಕುಲ ರಸ್ತೆ ಡೆನಿಸನ್ಸ್ ಹೋಟೆಲ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಸೇರಿದಂತೆ ಆನಂದ ನಗರ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಗೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಹೂವು ಹಾಕಿ, ಕುಂಕುಮ, ಅರಿಶಿಣ ಹಾಕಿ ಪೂಜೆ ಸಲ್ಲಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿ ನಗರದ ಬಹುತೇಕ ರಸ್ತೆಗಳಲ್ಲಿ ತಗ್ಗು-ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ನಗರದಲ್ಲಿ ಸಾಕಷ್ಟು ವಾಹನ ದಟ್ಟಣೆ ಉಂಟಾಗುತ್ತಿದೆ. ಇದರಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ಸಾರ್ವಜನಿಕರಿಗೆ ಸೌಲಭ್ಯ ಕಲ್ಪಿಸಬೇಕಾದ ಸ್ಥಳೀಯ ಆಡಳಿತ ವ್ಯವಸ್ಥೆ ಕಣ್ಣು ಮುಚ್ಚಿ ಕುಳಿತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗಳ ದುರಸ್ತಿ ಮಾಡುವಂತೆ ಸಾಕಷ್ಟು ಬಾರಿ ಪ್ರತಿಭಟನೆಗಳನ್ನು ಮಾಡಿ ಮನವಿ ಸಲ್ಲಿಸಿದಾಗ ಅಧಿಕಾರಿಗಳು ಒಂದು ಗುಂಡಿಯನ್ನು ಮುಚ್ಚಿ ಅದಕ್ಕೆ ಲಕ್ಷಾಂತರ ರುಪಾಯಿ ವ್ಯಯಿಸಲಾಗಿದೆ ಎಂದು ಬಿಲ್ ಹಚ್ಚಿ ಜನರ ತೆರಿಗೆ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ.

ಕೆಆರ್‌ಎಸ್ ಪಕ್ಷದ ಅಧ್ಯಕ್ಷ ಮಂಜುನಾಥ ಹಿರೇಮಠ, ಕಾರ್ಯದರ್ಶಿ ದೇವೇಂದ್ರ ಬಳ್ಳಾರಿ, ಉಪ ಕಾರ್ಯದರ್ಶಿ ಮಂಜು ಮಾನೆ, ಆನಂದ ಬಾಗಲೆ, ಶ್ರೀಕಾಂತ ನಟೆಗಲ್, ಅಭಿಜಿತ ಕುಲಕರ್ಣಿ ಸೇರಿದಂತೆ ಹಲವರಿದ್ದರು.