ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಉಪ ವಿಭಾಗಾಧಿಕಾರಿ ಡಾ.ಕಾಂತರಾಜ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗಬಾರದು ಎಂದು ಉಪ ವಿಭಾಗಾಧಿಕಾರಿ ಡಾ.ಕಾಂತರಾಜ್ ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಒಟ್ಟು 1,27,641 ಐದು ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಜಿಲ್ಲಾದ್ಯಂತ 1,162 ಪೋಲಿಯೋ ಬೂತ್‍ಗಳನ್ನು ಸ್ಥಾಪಿಸಲಾಗಿದ್ದು, 2,324 ಲಸಿಕೆದಾರರು ಹಾಗೂ 235 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎನ್ ಕಾಶಿ ಮಾತನಾಡಿ, ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ, ಈ ಬಾರಿ ತಪ್ಪದೇ ಮೊದಲ ದಿನದಂದೇ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ ಮಾತನಾಡಿ, ಜೂ.28ರಂದು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಬಳಿಕ ಜುಲೈ 1ರವರೆಗೆ ಮೂರು ದಿನಗಳ ಕಾಲ ಆರೋಗ್ಯ ಕಾರ್ಯಕರ್ತರು ಮತ್ತು ಸ್ವಯಂ ಸೇವಕರು ಪ್ರತಿ ಮನೆಗೆ ಭೇಟಿ ನೀಡಲಿದ್ದಾರೆ. ಬೂತ್‍ಗಳಲ್ಲಿ ಲಸಿಕೆ ಪಡೆಯದ ಮಕ್ಕಳನ್ನು ಪತ್ತೆ ಹಚ್ಚಿ ಲಸಿಕೆ ನೀಡಲಾಗುವುದು. ಈ ಅಭಿಯಾನಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ನಗರದ ಜಿಲ್ಲಾ ಆಸ್ಪತ್ರೆ ಆವರಣದಿಂದ ಆರಂಭಗೊಂಡ ಜಾಗೃತಿ ಜಾಥಾವು ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತದ ಮಾರ್ಗವಾಗಿ ಸಾಗಿ ಮರಳಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಅಂತ್ಯಗೊಂಡಿತು. ಮಕ್ಕಳ ತಜ್ಞೆ ಡಾ.ಸುಜಾತ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್, ಉಪ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದ ರೆಡ್ಡಿ ಕಣ್ಣೂರ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಬಿ.ಜಾನಕಿ, ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಗಾಯಿತ್ರಿ ಶಿವರಾಂ, ಉಪ ಸಭಾಪತಿ ಅರುಣ್ ಕುಮಾರ್, ರೋಟರಿ ಕ್ಲಬ್‍ನ ಸವಿತಾ ಶಿವಕುಮಾರ್, ವಾಸವಿ ಕ್ಲಬ್ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಸರ್ಕಾರಿ ಹಾಗೂ ಜಾನ್ನವಿ ನಸಿರ್ಂಗ್ ಕಾಲೇಜು ವಿದ್ಯಾರ್ಥಿಗಳು, ಕೋಟೆ ಪ್ರೌಢಶಾಲೆಯ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.