ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ. 21ರಂದು ನಡೆಯುವ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳು ಸಹಕಾರ ನೀಡಬೇಕು, ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ನಿಗಾವಹಿಸುವ ಮೂಲಕ ಶೇ. 100 ಗುರಿ ಸಾಧನೆ ಆಗಬೇಕು. ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಬೇಕು. ಗ್ರಾಮೀಣ ಭಾಗದಲ್ಲಿ ವ್ಯಾಪಕ ಪ್ರಚಾರ ನಡೆಸುವ ಮೂಲಕ ಜನರಲ್ಲಿ ಅರಿವು ಮೂಡಿಸಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸ್ವಯಂ ಸೇವಾ ಸಂಸ್ಥೆಗಳನ್ನು ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ಮಾಡಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ತಾಲೂಕಿನಲ್ಲಿ ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಹಸೀಲ್ದಾರ್‌ ಕೆ.ಸಿ. ಸೌಮ್ಯ ತಿಳಿಸಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ. 21ರಂದು ನಡೆಯುವ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳು ಸಹಕಾರ ನೀಡಬೇಕು, ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ನಿಗಾವಹಿಸುವ ಮೂಲಕ ಶೇ. 100 ಗುರಿ ಸಾಧನೆ ಆಗಬೇಕು. ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಬೇಕು. ಗ್ರಾಮೀಣ ಭಾಗದಲ್ಲಿ ವ್ಯಾಪಕ ಪ್ರಚಾರ ನಡೆಸುವ ಮೂಲಕ ಜನರಲ್ಲಿ ಅರಿವು ಮೂಡಿಸಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸ್ವಯಂ ಸೇವಾ ಸಂಸ್ಥೆಗಳನ್ನು ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ಮಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ಮಾತನಾಡಿ, ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ಆರೋಗ್ಯ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ತಾಲೂಕಿನಲ್ಲಿ 5 ವರ್ಷ ವಯೋಮಿತಿಯ10,151 ಮಕ್ಕಳಿದ್ದಾರೆ. ಪೋಲಿಯೋ ಹನಿ ಹಾಕಲು 102 ಬೂತ್‌ಗಳನ್ನು ತೆರೆಯಲಾಗುವುದು. 571 ಸಿಬ್ಬಂದಿ ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಲಸಿಕಾ ಕಾರ್ಯಕ್ಕೆ ಎಲ್ಲ ಇಲಾಖೆಗಳು ತಮ್ಮ ವಾಹನಗಳನ್ನು ನೀಡುವ ಮೂಲಕ ಸಹಕಾರ ನೀಡುವಂತೆ ಮನವಿ ಮಾಡಿದರು. ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಟಿ. ಕೆ.ಮಂಜುಳಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪರಮೇಶ್, ಮಹಿಳಾ ಆರೋಗ್ಯ ಸಂದರ್ಶಕಿ ಲೀನಾಕುಮಾರಿ, ಆಶಾ ಮೆಂಟರ್‌ ಕವಿತಾ, ಸಿಡಿಪಿಒ ವೆಂಕಟೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.