ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಚಿತ್ರನಟ ದಿ.ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ತಮ್ಮ ಜೀವಿತಾವಧಿಯಲ್ಲಿ ಮಾಡಿರುವ ಸಮಾಜಮುಖಿ ಸೇವಾ ಕಾರ್ಯಗಳು ಇಂದಿಗೂ ಮಾದರಿಯಾಗಿವೆ ಎಂದು ಗ್ರಾಪಂ ಸದಸ್ಯ ಎಚ್.ಎಲ್.ದಯಾನಂದ್ ತಿಳಿಸಿದರು.ತಾಲೂಕಿನ ಹೊಸಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ರೋಟರಿ ಸಂಸ್ಥೆ, ಹೊಸಕೆರೆ ಗ್ರಾಮಾಭಿವೃದ್ಧಿ ಸಂಘ, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಚಿತ್ರರಂಗದಲ್ಲಿ ಅತ್ಯುತ್ತಮ ಹೆಸರು ಗಳಿಸುವ ಜತೆಗೆ ಬಡ ಜನರಿಗೆ ಹಲವು ಸೇವಾ ಕಾರ್ಯಗಳನ್ನು ಕೈಗೊಂಡು ಇತರರಿಗೆ ಮಾದರಿಯಾಗಿದ್ದಾರೆ ಎಂದರು.ಅತಿ ಚಿಕ್ಕ ವಯಸ್ಸಿನಲ್ಲೇ ಪುನೀತ್ ರಾಜ್‌ಕುಮಾರ್ ತಮ್ಮನ್ನು ಬಿಟ್ಟು ಅಗಲಿರುವುದು ನೋವಿನ ಸಂಗತಿ. ಅಪ್ಪು ಅವರ ಸಮಾಜಮುಖಿ ಸೇವಾ ಕಾರ್ಯಗಳು ಜನಮಾಸದಲ್ಲಿ ಅಚ್ಚಳಿಯದೆ ಉಳಿಯಲಿದ್ದು, ಅವರ ಹುಟ್ಟುಹಬ್ಬದ ಅಂಗವಾಗಿ ರಾಜ್ಯಾದ್ಯಂತ ಅಭಿಮಾನಿಗಳು, ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ಥಕತೆ ಮೆರೆಯುತ್ತಿದ್ದಾರೆ ಎಂದು ತಿಳಿಸಿದರು.
ರೋಟರಿ ಸಂಸ್ಥೆ ಅಧ್ಯಕ್ಷ ಚನ್ನಂಕೇಗೌಡ ಮಾತನಾಡಿ, ಹಲವು ವರ್ಷಗಳಿಂದಲೂ ದೇಶಕ್ಕಾಗಿ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದ ಮಹನೀಯರ ಹೆಸರಿನಲ್ಲಿ ಸಮಾಜಮುಖಿ ಸೇವಾ ಕಾರ್ಯಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿರುವುದಾಗಿ ಹೇಳಿದರು.ಶಿಬಿರದಲ್ಲಿ ಸುಮಾರು 70ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ಈ ವೇಳೆ ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಮಿಲಿಟರಿ ಕುಮಾರ್, ರವಿ, ನಿವೃತ್ತ ಪ್ರಾಂಶುಪಾಲ ಪ್ರೊ.ಕಾಳಯ್ಯ, ಶಿವಕುಮಾರ್, ಇಂದುಕುಮಾರ್, ತಿಪ್ಪೂರ್ ರಾಜೇಶ್, ಕೃಷ್ಣಪ್ಪ, ಬಸವರಾಜು, ಪ್ರಭಾಕರ್, ಮಹೇಶ್, ಮಧುಸೂದನ್ ಇತರರಿದ್ದರು.