ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಖರೀದಿ ಏಜೆನ್ಸಿಯಾಗಿದ್ದು, ಕಡಲೆಕಾಳು ಖರೀದಿಗೆ ಜಿಲ್ಲೆಯಲ್ಲಿ ಬಳ್ಳಾರಿ ಮತ್ತು ಸಿರುಗುಪ್ಪ ಪಟ್ಟಣದಲ್ಲಿ ಖರೀದಿ ಕೇಂದ್ರ ಆರಂಭಿಸಬೇಕಾಗಿದೆ.
ಬಳ್ಳಾರಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹಿಂಗಾರು ಹಂಗಾಮಿನ ಕಡಲೆಕಾಳು ಉತ್ಪನ್ನ ಖರೀದಿಸುವ ಮತ್ತು ಖರೀದಿ ಕೇಂದ್ರಗಳನ್ನು ಆರಂಭಿಸುವ ಕುರಿತು ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್ ಗೆ ₹5875 ದಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರಿಂದ ಕಡಲೆಕಾಳು ಬೆಳೆದ ವಿಸ್ತೀರ್ಣಕ್ಕೆ ಅನುಗುಣವಾಗಿ ಉತ್ಪನ್ನ ಖರೀದಿಸಲಾಗುತ್ತದೆ. ಬೆಂಬಲ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಫ್ರೂಟ್ಸ್ ತಂತ್ರಾಂಶದ ಆಧಾರದ ಮೇಲೆ ರೈತರಿಂದ ಖರೀದಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಖರೀದಿ ಏಜೆನ್ಸಿಯಾಗಿದ್ದು, ಕಡಲೆಕಾಳು ಖರೀದಿಗೆ ಜಿಲ್ಲೆಯಲ್ಲಿ ಬಳ್ಳಾರಿ ಮತ್ತು ಸಿರುಗುಪ್ಪ ಪಟ್ಟಣದಲ್ಲಿ ಖರೀದಿ ಕೇಂದ್ರ ಆರಂಭಿಸಬೇಕಾಗಿದ್ದು, ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗೋದಾಮುಗಳನ್ನು ಶುದ್ಧವಾಗಿಟ್ಟುಕೊಳ್ಳಬೇಕು. ಮೂಲಭೂತ ಸೌಕರ್ಯವುಳ್ಳ ಖರೀದಿ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು ತೂಕ ಪ್ರಮಾಣೀಕತೆ ಸೇರಿದಂತೆ ಬೇಕಾದ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಖರೀದಿಸಲು ಈಗಾಗಲೇ ರೈತರ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಫೆ.12 ರಿಂದ ಮೇ 2 ವರೆಗೆ ಉತ್ಪನ್ನ ಖರೀದಿಸಲು ಅವಧಿಯನ್ನು ನಿಗದಿಗೊಳಿಸಲಾಗಿದೆ ಎಂದರು.ಜಿಲ್ಲೆಯ ರೈತರು ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸುವಾಗ ಆಧಾರ್ ಕಾರ್ಡ್, ಪಹಣಿ ಪ್ರತಿ, ಆಧಾರ್ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸ್‌ಬುಕ್ ಜೆರಾಕ್ಸ್ ಪ್ರತಿ ಸಲ್ಲಿಸಬೇಕು. ಖರೀದಿ ಕೇಂದ್ರಗಳಲ್ಲಿ ಪಿ.ಓ.ಎಸ್. ಯಂತ್ರದ ಮೂಲಕ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಆಧಾರ್ ಬಯೋ ಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿದ್ದು, ರೈತರು ಇದಕ್ಕೆ ಸಹಕರಿಸಬೇಕು ಎಂದರು.
ಅದೇರೀತಿಯಾಗಿ ರೈತರು ಫ್ರೂಟ್ಸ್ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳುವ ಕುರಿತು ಸಹ ಅಗತ್ಯ ಮಾಹಿತಿ ರೈತರಿಗೆ ಒದಗಿಸುವಂತೆಯೂ ಸೂಚಿಸಿದರು.ರೈತರ ಹೆಸರಿನ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಜಮೆ ಆಗಲಿದ್ದು, ರೈತರು ಕಡ್ಡಾಯವಾಗಿ ಎಫ್‌ಐಡಿ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಕೊಳ್ಳುವಂತೆ ತಿಳಿಸಬೇಕು ಎಂದರು.
ಸಭೆಯಲ್ಲಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಓಂಕಾರಯ್ಯ, ಕೃಷಿ ಜಂಟಿ ನಿರ್ದೇಶಕ ಸೋಮಸುಂದರ್, ಸಹಕಾರ ಇಲಾಖೆಯ ಉಪನಿಬಂಧಕ ವೀರಭದ್ರಯ್ಯ, ಕಾನೂನು ಮಾಪನ ಶಾಸ್ತç ಇಲಾಖೆಯ ನಿರೀಕ್ಷಕ ಮನೋಜ್ ಕುಮಾರ್ ಇದ್ದರು.