ಸಾರಾಂಶ
ಹಾವೇರಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನ ಖರೀದಿ ಕೇಂದ್ರಗಳನ್ನು ಪ್ರಥಮ ಹಂತದಲ್ಲಿ ಜಿಲ್ಲೆಯ ಹಾವೇರಿ ಹಾಗೂ ಸವಣೂರು ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಗಳಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನಿಷ್ಠ ಬೆಂಬಲ ಬೆಲೆಯಡಿ ಸರ್ಕಾರದ ಮಾರ್ಗಸೂಚಿಯಂತೆ ಹೆಸರುಕಾಳು ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬರುವ ದಿನಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬೆಂಬಲ ಬೆಲೆ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳು ಉತ್ಪನ್ನ ಪ್ರತಿ ಕ್ವಿಂಟಲ್‌ಗೆ 8,768 ರು.ಗಳಂತೆ ಖರೀದಿಗೆ, ಸರ್ಕಾರದ ಆದೇಶದ ದಿನಾಂಕದಿಂದ 80 ದಿನಗಳವರೆಗೆ ಹಾಗೂ ನೋಂದಣಿ ಕಾರ್ಯ ಜೊತೆಯಲ್ಲಿ ಖರೀದಿ ಕಾಲಾವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಸಂಸ್ಥೆಯ ಮೂಲಕ ಖರೀದಿಸಲು ಆದೇಶಿಸಲಾಗಿದೆ ಎಂದರು.ಡಿಬಿಟಿ ಮೂಲಕ ಹಣ ಜಮೆ: ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಿದ ಹೆಸರುಕಾಳು ಉತ್ಪನದ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ಜಮೆ ಮಾಡಬೇಕು ಎಂದು ಸೂಚಿಸಿದರು.ಬೆಂಬಲ ಬೆಲೆಯಡಿ ಹೆಸರುಕಾಳು ಉತ್ಪನ್ನ ಖರೀದಿ ಕೇಂದ್ರ ಆರಂಭಿಸಿರುವ ಕುರಿತಂತೆ ವ್ಯಾಪಕ ಪ್ರಚಾರನಡೆಸಿ, ಕರಪತ್ರ, ಬ್ಯಾನರ್ ಅಳಡಿಸುವ ಮೂಲಕ ರೈತರಿಗೆ ಮಾಹಿತಿ ತಲುಪಿಸಬೇಕು. ರೈತರಿಂದ ಖರೀದಿಸಿದ ಭತ್ತ ಉತ್ಪನ್ನ ದಾಸ್ತಾನುಮಾಡಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಉಗ್ರಾಣಗಳನ್ನು ಕಾಯ್ದಿರಿಸಬೇಕು ಎಂದು ಸೂಚನೆ ನೀಡಿದರು.ಎಫ್‌ಎಕ್ಯೂ ಗುಣಮಟ್ಟ:ಹೆಸರುಕಾಳಿನ ಎಫ್.ಎ.ಕ್ಯೂ ಗುಣಮಟ್ಟ ಗುರುತಿಸಲು ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಸಿಬ್ಬಂದಿಗಳನ್ನು ಖರೀದಿ ಕೇಂದ್ರಕ್ಕೆ ನಿಯೋಜಿಸಬೇಕು. ಪ್ರತಿ ರೈತರಿಂದ ಪ್ರತಿ ಎಕರೆಗೆ ಮೂರು ಕ್ವಿಂಟಲ್‌ನಂತೆ ಗರಿಷ್ಠ 15 ಕ್ವಿಂಟಲ್ ಹೆಸರುಕಾಳು ಖರೀದಿಸಲು ಅವಕಾಶವಿದೆ. ಬಿತ್ತನೆ ಪ್ರದೇಶ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 514 ಹೆಕ್ಟೇರ್ ಪ್ರದೇಶದಲ್ಲಿ ಹೆಸರುಕಾಳು ಬಿತ್ತನೆಯಾಗಿದೆ. ಸವಣೂರ ತಾಲೂಕಿನಲ್ಲಿ 302 ಹೆಕ್ಟೇರ್ ಹಾಗೂ ಹಾವೇರಿ ತಾಲೂಕಿನಲ್ಲಿ 120 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತೆಯಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಸಹಕಾರಿ ಸಂಘಗಳ ಉಪನಿಬಂಧಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಶಾಖಾ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಇದ್ದರು.