ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಸಂಬಂದ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಮೆಕ್ಕೆಜೋಳ ಸಂಗ್ರಹದ ಸಾಮರ್ಥ್ಯದ ವರದಿ ಬಂದ ನಂತರವೇ ಖರೀದಿ ಕೇಂದ್ರ ಸ್ಥಾಪನೆ ನಿರ್ಧರಿಸಲಾಗುವುದೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕುಕ್ಕುಟ ಹಾಗೂ ಪಶು ಆಹಾರ ಉತ್ಪಾದನಾ ಘಟಕಗಳಿಗೆ ಅವಶ್ಯವಿರುವ ಪ್ರಮಾಣದ ಮೆಕ್ಕೆಜೋಳವನ್ನು ಕನಿಷ್ಟ ಬೆಂಬಲ ಬೆಲೆಯಲ್ಲಿ (ಎಂಎಸ್‍ಪಿ) ರೈತರಿಂದ ಖರೀದಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಕನಿಷ್ಟ ಬೆಂಬಲ ಬೆಲೆಯಲ್ಲಿ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರು ರೈತರಿಂದ ಗರಿಷ್ಟ ಪ್ರಮಾಣದಲ್ಲಿ ಮೆಕ್ಕೆಜೋಳ ಖರೀದಿಸಬೇಕು ಎಂದು ಸೂಚಿಸಿದರು.
ಕುಕ್ಕುಟ ಹಾಗೂ ಪಶು ಆಹಾರ ಉತ್ಪದನಾ ಘಟಕಗಳ ವಾರ್ಷಿಕ ಆಹಾರ ಉತ್ಪಾದನೆ, ಮೆಕ್ಕೆಜೋಳ ಸಂಗ್ರಹ ಸಾಮಾಥ್ರ್ಯದ ಮಾಹಿತಿಯನ್ನು ಸಂಗ್ರಹಿಸಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಮೂಲಕ ನೇರವಾಗಿ ರೈತರಿಂದ ಗುಣಮಟ್ಟದ ಮೆಕ್ಕೆಜೋಳ ಖರೀದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನಾ ಸಂಸ್ಥೆಗಳಿಗೆ ಅವಶ್ಯವಿರುವ ಪ್ರಮಾಣದ ಮೆಕ್ಕೆಜೋಳ ಖರೀದಿ ಮಾಡುವ ಸಂಬಂಧ ಜಿಲ್ಲೆಯ ಬೇರೆ ಬೇರೆ ತಾಲೂಕಿನಲ್ಲಿರುವ ವಿವಿಧ ಘಟಕಗಳಿಗೆ ತಹಸೀಲ್ದಾರ್, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರು, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕರನ್ನು ಒಳಗೊಂಡ ತಂಡ ಭೇಟಿ ನೀಡಿ ಪರಿಶೀಲಿಸಿ, ಘಟಕಗಳ ಸಂಗ್ರಹಣಾ ಸಾಮಥ್ರ್ಯದ ಬಗ್ಗೆ ವರದಿ ನೀಡಿದ ನಂತರ ಖರೀದಿ ಕೇಂದ್ರಗಳ ಸ್ಥಾಪನೆ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
ಜಿಲ್ಲೆಯಾದ್ಯಂತ ಅಧಿಕ ಪ್ರಮಾಣದಲ್ಲಿ ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಗರಿಷ್ಠ ಪ್ರಮಾಣದಲ್ಲಿ ಖರೀದಿ ಮಾಡುವುದರ ಮೂಲಕ ರೈತರ ನೆರವಿಗೆ ಧಾವಿಸುವ ಅಗತ್ಯವಿದೆ. ಈ ಬಗ್ಗೆ ಸರ್ಕಾರ ಕೂಡಾ ಸ್ಪಷ್ಟ ನಿರ್ದೇಶನ ನೀಡಿದೆ ಎಂದರು.ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್ ಮಾತನಾಡಿ, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಅವಧಿಯಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಸ್ಥೆಯು ರೈತರಿಂದ ಖರೀದಿ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅದರಂತೆ ಅನುಸರಿಸಲಾಗುವುದು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ಪಾಲಿಕ್ಲಿನಿಕ್ ಉಪನಿರ್ದೇಶಕ ಡಾ.ಸಿ.ತಿಪ್ಪೇಸ್ವಾಮಿ, ಸಹಕಾರ ಸಂಘಗಳ ಉಪನಿಬಂಧಕ ದಿಲೀಪ್ ಕುಮಾರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ಬಸವೇಶ್, ಪಶು ಆಹಾರ ಉತ್ಪಾದನಾ ಘಟಕಗಳ ಪ್ರತಿನಿಧಿಗಳು, ಟಿಎಪಿಸಿಎಂಎಸ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳು ಇದ್ದರು.