ಖಾಸಗಿ ಶಾಲೆಗಳ ಶುಲ್ಕ ದಂಧೆಗೆ ಕಡಿವಾಣ ಹಾಕಿ

| Published : May 16 2024, 12:51 AM IST

ಸಾರಾಂಶ

ಸರ್ಕಾರಿ ಶಿಕ್ಷಣ ವ್ಯವಸ್ಥೆಯು ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟಿದ್ದು, ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದರ ಪರಿಣಾಮ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆಯು ಮಿತಿ ಮೀರುತ್ತಿದೆ. ಇಂತಹ ಧನದಾಹಕ್ಕೆ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

- ಎಎಪಿ ಮುಖಂಡರ ಆಗ್ರಹ । ದೆಹಲಿಯಲ್ಲಿ ಕೇಜ್ರಿವಾಲ್ ಮಾದರಿಯಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂಗೆ ಒತ್ತಾಯ- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಸರ್ಕಾರಿ ಶಿಕ್ಷಣ ವ್ಯವಸ್ಥೆಯು ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟಿದ್ದು, ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದರ ಪರಿಣಾಮ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆಯು ಮಿತಿ ಮೀರುತ್ತಿದೆ. ಇಂತಹ ಧನದಾಹಕ್ಕೆ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಖಾಸಗಿ ಶಿಕ್ಷಣ ಸಂಸ್ಥೆಗಳ ಧನದಾಹಕ್ಕೆ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮೊದಲು ಮಾಡಬೇಕು. ಇದರ ಜೊತೆಗೆ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪಕ್ಕೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರವು ಖಾಸಗಿ ಶಾಲೆಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ. ಆದರೆ, ಕರ್ನಾಟಕದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತಿ ವರ್ಷ ಶೇ.15ರಷ್ಟು ಶುಲ್ಕ ಹೆಚ್ಚಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳ ಅವ್ಯವಸ್ಥೆಯಿಂದಾಗಿ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯಕ್ಕೆಂದು ಖಾಸಗಿ ಶಾಲೆಗಳ ಮೊರೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆ ಮಿತಿ ಮೀರುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಹೆಚ್ಚಿದೆ. ಆದರೆ, ರಾಜ್ಯದಲ್ಲಿ ಶುಲ್ಕ ನಿಯಂತ್ರಣ ಪ್ರಾಧಿಕಾರ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ. ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲವೆಂದು ಹೈಕೋರ್ಟ್ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ನ್ಯಾಯಾಲಯದ ಮುಂದೆ ಸಮರ್ಪಕ ವಾದ ಮಂಡಿಸದಿರುವುದೇ ಇದಕ್ಕೆಲ್ಲಾ ಕಾರಣ ಎಂದು ದೂರಿದರು.

ರಾಜ್ಯ ಸರ್ಕಾರವು ಖಾಸಗಿ ಶಾಲೆಗಳೊಂದಿಗೆ ಕೈ ಜೋಡಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಾದರೂ ಖಾಸಗಿ ಶಾಲೆಗಳ ಧನದಾಹ, ಶುಲ್ಕ ದಂಧೆಯಿಂದ ಪಾಲಕರನ್ನು ರಕ್ಷಿಸುವ ಕೆಲಸವನ್ನು ಮಾಡಬೇಕು. ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಕಡಿವಾಣ ಹಾಕಲಿ. ಶುಲ್ಕ ನಿಯಂತ್ರಣ ಪ್ರಾಧಿಕಾರದ ಮೂಲಕ ತಡೆ ನೀಡುವ ಕೆಲಸ ಮಾಡಬೇಕು. ಈಗಾಗಲೇ ರಾಜ್ಯದಲ್ಲಿ ಲೋಕಸಭೆ ಚುನಾವಣೆಯು ಮುಗಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಇಂತಹ ಗಂಭೀರ ಸಂಗತಿ ಬಗ್ಗೆ ಗಮನಹರಿಸಲಿ ಎಂದು ಆಗ್ರಹಿಸಿದರು.

ರಾಜ್ಯದ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಸುಧಾರಿಸಲು, ಪರಿಣಾಮಕಾರಿಯಾಗಿ ಬೋಧನಾ ವ್ಯವಸ್ಥೆಯಾಗಲು ಸರ್ಕಾರ ಮೊದಲು ಕ್ರಮ ಕೈಗೊಳ್ಳಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ವಸೂಲಿ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೆ.ಎಸ್‌. ಶಿವಕುಮಾರಪ್ಪ ಒತ್ತಾಯಿಸಿದರು.

ಆಮ್ ಆದ್ಮಿ ಪಕ್ಷದ ಮುಖಂಡರಾದ ಆದಿಲ್ ಖಾನ್, ರವೀಂದ್ರ, ಸುರೇಶ ಸಿಡ್ಲಪ್ಪ, ಧರ್ಮನಾಯ್ಕ, ಹಾಲಸ್ವಾಮಿ, ಚನ್ನಬಸಪ್ಪ ಇತರರು ಇದ್ದರು.

- - - -15ಕೆಡಿವಿಜಿ5, 6:

ದಾವಣಗೆರೆಯಲ್ಲಿ ಬುಧವಾರ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.