ಸಾರಾಂಶ
ಕಾರವಾರ: ಜಿಲ್ಲೆಯ ಎಲ್ಲ ಕಡಲ ತೀರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಗರಿಷ್ಠ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಬೀಚ್‌ನಲ್ಲಿ ಯಾವುದೇ ಜೀವ ಹಾನಿ ಸಂಭವಿಸದಂತೆ ಮುನ್ನೆಚ್ಚರಿಕೆ
ವಹಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಂಕಾಳು ವೈದ್ಯ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬೀಚ್‌ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಸಮುದ್ರದ ಅಪಾಯಗಳ ಬಗ್ಗೆ ತಿಳಿಸಿ, ಸುರಕ್ಷತಾ ಕ್ರಮಗಳ ಬಗ್ಗೆ ಬೀಚ್ ಜೀವ ರಕ್ಷಕರ ಮೂಲಕ ಜಾಗೃತಿ ಮುಡಿಸಬೇಕು. ಎಲ್ಲ ತೀರಗಳಿಗೆ ಅಗತ್ಯವಿರುವಷ್ಟು ಸಂಖ್ಯೆಯ ಜೀವ ರಕ್ಷಕರನ್ನು ಹಾಗೂ ಮೇಲ್ವಿಚಾರಕರನ್ನು ನೇಮಕ ಮಾಡುವಂತೆ ಮತ್ತು ಪ್ರವಾಸೋದ್ಯಮ ಇಲಾಖೆಗೂ ಸಹ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಬೀಚ್‌ನಲ್ಲಿ ನೇಮಕ ಮಾಡುವ ಪ್ರತಿ ಜೀವ ರಕ್ಷಕರಿಗೆ, ಅವರು ಬೀಚ್‌ನಲ್ಲಿ ಕಾರ್ಯನಿರ್ವಹಿಸಬೇಕಾದ ನಿರ್ದಿಷ್ಟ ಸ್ಥಳವನ್ನು ಹಂಚಿಕೆ ಮಾಡಿ ಆ ಪ್ರದೇಶದಲ್ಲಿ ಪ್ರವಾಸಿಗರಿಗೆ ಯಾವುದೇ ಅಪಾಯವಾಗದಂತೆ ನಿರಂತರವಾಗಿ ನಿಗಾ ವಹಿಸಬೇಕು. ಅವರಿಗೆ ಸೂಕ್ತ ತರಬೇತಿ ಹಾಗೂ ಅಗತ್ಯವಿರುವ ಜೀವ ರಕ್ಷಣಾ ಸಾಮಗ್ರಿಗಳನ್ನು ಮತ್ತು ಸಮವಸ್ತ್ರವನ್ನು ಒದಗಿಸಬೇಕು. ತೀರದಲ್ಲಿ ಪೊಲೀಸ್ ಸಿಬ್ಬಂದಿ ಸಹ ನಿಯೋಜಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಿದರು.ಜಿಲ್ಲೆಯಲ್ಲಿನ ಅನಧಿಕೃತ ಹೋಮ್ ಸ್ಟೇಗಳ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ, ಪ್ರಸ್ತುತ ಸರ್ಕಾರದ ಮಾರ್ಗಸೂಚಿಯಂತೆ ಅನುಮತಿ ಪಡೆದು ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಹೋಮ್ ಸ್ಟೇಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಹಾಗೂ ಅನಧಿಕೃತ ಎಂದು ಕಂಡು ಬರುವ ಹೋಮ್ ಸ್ಟೇ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಹೊಸ ಪ್ರವಾಸೋದ್ಯಮ ಚಟುವಟಿಕೆಗೆ ಅನುಮತಿ ನೀಡುವ ಮೊದಲು ಕಡ್ಡಾಯವಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಭೆಯಲ್ಲಿ ಪರಿಶೀಲಿಸಿ ಅನುಮತಿ ನೀಡಬೇಕು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲ ಪೂರಕ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ ಸಚಿವರು, ಸಿ.ಆರ್. ಝಡ್ ಸೇರಿದಂತೆ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಜನತೆಯ ಮತ್ತು ಮೀನುಗಾರರ ಅಭಿವೃದ್ಧಿಗೆ ಪೂರಕವಾದಂತಹ ಪ್ರವಾಸೋದ್ಯಮ ಚಟುವಟಿಕೆಗೆ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ನೀಡಲಾಗುವುದು ಎಂದರು.ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್,
ಡಿಎಫ್‌ಒ ರವಿಶಂಕರ್, ಉಪ ವಿಭಾಗಾಧಿಕಾರಿಗಳಾದ ಕನಿಷ್ಕ, ಕಾವ್ಯಾರಾಣಿ, ಡಾ. ನಯನಾ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಯಂತ್ ಮೊದಲಾದವರು ಇದ್ದರು.