ಲೋಕಸಭಾ ಚುನಾವಣೆಯಲ್ಲಿ ಪುತ್ತಿಲ ಸ್ಪರ್ಧೆ: ಪ್ರಸನ್ನ ಕುಮಾರ್‌ ಮಾರ್ತಾ

| Published : Mar 01 2024, 02:23 AM IST

ಲೋಕಸಭಾ ಚುನಾವಣೆಯಲ್ಲಿ ಪುತ್ತಿಲ ಸ್ಪರ್ಧೆ: ಪ್ರಸನ್ನ ಕುಮಾರ್‌ ಮಾರ್ತಾ
Share this Article
  • FB
  • TW
  • Linkdin
  • Email

ಸಾರಾಂಶ

ಮುಂಬರುವ ಲೋಕಸಭಾ ಚುನಾವಣೆ ಸಹಿತ ಜಿಲ್ಲೆಯಲ್ಲಿ ನಡೆಯಲಿರುವ ಮುಂದಿನ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ನಡೆಸಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ ಘೋಷಿಸಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.

ಪುತ್ತೂರು: ಮಾತೃಪಕ್ಷವಾಗಿರುವ ಬಿಜೆಪಿಯ ಮುಖಂಡರು ಹಾಗೂ ಸಂಘ ಪರಿವಾರದ ನಾಯಕರ ಜೊತೆ ನಡೆಸಲಾಗಿರುವ ಸಂಧಾನ ಸಫಲ ಆಗದ ಹಿನ್ನೆಲೆಯಲ್ಲಿ ಸಂಘಟನೆಯ ಕಾರ್ಯಕರ್ತರ ನಿರ್ಧಾರದಂತೆ ಮುಂಬರುವ ಲೋಕಸಭಾ ಚುನಾವಣೆ ಸಹಿತ ಜಿಲ್ಲೆಯಲ್ಲಿ ನಡೆಯಲಿರುವ ಮುಂದಿನ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ನಡೆಸಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ ಘೋಷಿಸಿದ್ದಾರೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯವಾಗಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಪುತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಅರುಣ್ ಕುಮಾರ್ ಪುತ್ತಿಲ ಸ್ಥಾಪಿತ ಪುತ್ತಿಲ ಪರಿವಾರದ ಮುಂದಿನ ನಡೆಯನ್ನು ಸಂಘಟನೆ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಬಿಚ್ಚಿಟ್ಟಿದ್ದಾರೆ. ಈಗಾಗಲೇ ಬಿಜೆಪಿ ನಾಯಕರಾದ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ಸಂಘ ಪರಿವಾರದ ಸಂತೋಷ್ ಜಿ ಮತ್ತಿತರ ಜೊತೆ ಸಂಧಾನ ನಡೆಸಲಾಗಿತ್ತು. ಸಂಧಾನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆದರೆ ಈತನಕ ಸಕಾರಾತ್ಮಕ ಪ್ರತಿಕ್ರಿಯೆ ಅವರಿಂದ ಬಾರದ ಕಾರಣ ಕಾರ್ಯಕರ್ತರ ಮತ್ತು ಮತದಾರರ ಹಿತದೃಷ್ಟಿಯಿಂದ ಅವರ ಆಶಯದಂತೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯಮಟ್ಟಕ್ಕೆ ವಿಸ್ತಾರ: ಪುತ್ತಿಲ ಪರಿವಾರ ಈತನಕ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾತ್ರ ಕಾರ್ಯಾಚರಿಸುತ್ತಿತ್ತು. ಮುಂದಿನ ದಿನಗಳಲ್ಲಿ ಪುತ್ತಿಲ ಪರಿವಾರ ಸಂಘಟನೆ ಜಿಲ್ಲೆ ಮತ್ತು ರಾಜ್ಯಮಟ್ಟಕ್ಕೆ ವಿಸ್ತಾರಗೊಳ್ಳಲಿದೆ.ಸೇವಾ ಕಾರ್ಯ ನಡೆಸಲಿದೆ. ಜತೆಗೆ ಮುಂದೆ ಜಿಲ್ಲೆಯಲ್ಲಿ ನಡೆಯುವ ಎಲ್ಲ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಮಾಡಲಿದೆ ಎಂದರು.