ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ೧೧೧ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಂಗಳವಾರ ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ ಕನ್ನಡ ರಸಪ್ರಶ್ನೆ ಹಾಗೂ ಪುಸ್ತಕ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ೧೧೧ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಂಗಳವಾರ ಪುತ್ತೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗೆ ಕನ್ನಡ ರಸಪ್ರಶ್ನೆ ಹಾಗೂ ಪುಸ್ತಕ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಮೇಲ್ವಿಚಾರಕ ಪೂರ್ಣೇಶ್ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೆ.ಎಸ್.ಆರ್.ಟಿ.ಸಿ ಅಧಿಕಾರಿ ಭಾಸ್ಕರ ಶೆಟ್ಟಿ, ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಬ್ದುಲ್ ಸಮದ್ ಭಾವ ಉಪಸ್ಥಿತರಿದ್ದರು. ಪುತ್ತೂರು ತಾಲೂಕು ಕ.ಸಾ.ಪ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು

ಆಶಯ ನುಡಿಗಳನ್ನಾಡಿದ ಕ.ಸಾ.ಪ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಗಡಿನಾಡ ಧ್ವನಿ ಶ್ರೇಯೋಭಿವೃದ್ಧಿ ಟ್ರಸ್ಟ್ ಸಂಸ್ಥಾಪಕ ಎಸ್. ಅಬೂಬಕ್ಕರ್ ಆರ್ಲಪದವು ಅವರು ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಪಂಡಿತರಿಗೆ ಸೀಮಿತವಾಗದೆ, ಜನಸಾಮಾನ್ಯರ ಮನೆ-ಮನಗಳನ್ನು ತಲುಪಿದಾಗ ಮಾತ್ರ ಸಂಸ್ಥಾಪಕರ ಕನಸು ನನಸಾಗಲು ಸಾಧ್ಯ. ಬಸ್ ನಿಲ್ದಾಣದಂತಹ ಸಾರ್ವಜನಿಕ ಸ್ಥಳದಲ್ಲಿ ಪುಸ್ತಕಗಳನ್ನು ಬಹುಮಾನವಾಗಿ ನೀಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತು ಮುಂದಿನ ಪೀಳಿಗೆಯಲ್ಲಿ ಓದುವ ಸಂಸ್ಕೃತಿಯನ್ನು ಬಿತ್ತುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ರಂಗಕರ್ಮಿ ರಂಗಯ್ಯ ಬಳ್ಳಾಲ್ ಕನ್ನಡ ರಸಪ್ರಶ್ನೆ ನಡೆಸಿಕೊಟ್ಟರು. ಸುಮಾರು ೫೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ರಸಪ್ರಶ್ನೆಯಲ್ಲಿ ಭಾಗವಹಿಸಿ ಪುಸ್ತಕ ಬಹುಮಾನ ಪಡೆದುಕೊಂಡರು. ಕಸಾಪ ಕಾರ್ಯಕಾರಿ ಸಮಿತಿ ಸದಸ್ಯೆ ಶಂಕರಿ ಶರ್ಮ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಸಾಹಿತ್ಯ ಪರಿಷತ್‌ನ ಈ ವಿನೂತನ ಕಾರ್ಯಕ್ರಮಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು.