ಸಾರಾಂಶ
೧೬ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ೧೫ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ .
ಕನ್ನಡಪ್ರಭ ವಾರ್ತೆ ಪುತ್ತೂರು
ವಿಶ್ವಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ೧೬ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ೧೫ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ ಎಂದು ವಿಶ್ವಹಿಂದು ಪರಿಷದ್ ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಾಟಾಳಿ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಹಿಂದು ಪರಿಷದ್ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಸಾಹಸ ಸ್ಪರ್ಧೆ ಉದ್ಘಾಟಿಸಲಿದ್ದಾರೆ. ಬಜರಂಗದಳ ಪುತ್ತೂರು ಜಿಲ್ಲೆ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಅವರು ಧ್ವಜ ಹಸ್ತಾಂತರ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಬಳಿ ಶೋಭಾಯಾತ್ರೆ ಆರಂಭವಾಗಲಿದೆ ಎಂದರು.ಆ.೯ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮುಂಭಾಗ ಬೆಳಗ್ಗೆ ದಿ.ಟಿ.ರಾಧಾಕೃಷ್ಣ ಭಟ್ ಇವರ ಸ್ಮರಣಾರ್ಥ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಲಿದೆ. ರಾತ್ರಿ ಸಭಾ ಕಾರ್ಯಕ್ರಮ ನಡೆಯಲಿದೆ.ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ ಅವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅನೇಕ ಮಂದಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ದಾಮೋದರ್ ಪಾಟಾಳಿ ಅವರು ತಿಳಿಸಿದರು. ಕಬಡ್ಡಿ ಪಂದ್ಯಾಟದ ವಿಜೇತರಿಗೆ ನಗದು ಬಹುಮಾನ ವಿತರಿಸಲಾಗುವುದು. ಆ.೧೦ಕ್ಕೆ ಕೃಷ್ಣವೇಷ, ಶಂಖನಾದ ಸ್ಪರ್ಧೆ, ಆ.೧೬ಕ್ಕೆ ಬೆಳಗ್ಗಿನಿಂದಲೇ ವಿವಿಧ ಸ್ಪರ್ಧೆಗಳು ಜರುಗಲಿದೆ ಆ. ೧೬ಕ್ಕೆ ಪುತ್ತೂರು ಮೊಸರುಕುಡಿಕೆ ವಿಶೇಷ ಉತ್ಸವ, ಶೋಭಾಯಾತ್ರೆ ನಡೆಯಲಿದ್ದು, ಬೆಳಗ್ಗೆ ಉದ್ದಕಂಬ ಸ್ಪರ್ಧೆ ಆರಂಭಗೊಳ್ಳಲಿದೆ. ಸಂಜೆಯಿಂದ ಬೊಳುವಾರು ಶ್ರೀ ಆಂಜನೇಯ ಮಂತ್ರಾಲಯದ ಮುಂಭಾಗದಿಂದ ಪುತ್ತೂರು ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆ ಮತ್ತು ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಸ್ಪರ್ಧೆಯ ಉದ್ಘಾಟನೆ ನಡೆಯಲಿದೆ ಎಂದು ತಿಳಿಸಿದರು. ಸುದ್ಧಿಗೋಷ್ಠಿಯಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷೆ ವೇದ ಲಕ್ಷಿಕಾಂತ್, ಸಂಚಾಲಕ ಅರುಣ್ ಕುಮಾರ್ ರೈ ಆನಾಜೆ, ಕಾರ್ಯದರ್ಶಿ ಗಣೇಶ್ ಕಾಮತ್, ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ಅದ್ಯಕ್ಷ ಜಯಂತ್ ಶೆಟ್ಟಿ ಕಂಬಳತ್ತಡ್ಡ ಉಪಸ್ಥಿತರಿದ್ದರು.