ಕನ್ನಡಪ್ರಭ ವಾರ್ತೆ ಸಿದ್ದಾಪುರ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಮತ್ತು ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯನ್ನು ಬೆಂಬಲಿಸಿ ಸಿಪಿಐಎಂ ವತಿಯಿಂದ ನೆಲ್ಯಹುದಿಕೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ವೇಳೆ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ದೇಶದ ಯುವ ಜನತೆಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದ್ದು, ಕೂಡಲೇ ಯುವ ಜನತೆಯ ಬೇಡಿಕೆ ಈಡೇರಿಸಬೇಕು. ಅಲ್ಲದೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಪ್ರಮುಖ ಭರತ್, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿರುವ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಪಾಲ್ಗೊಂಡಿದ್ದ ಆರೋಪಿತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಶಿಕ್ಷಣವನ್ನು ವ್ಯಾಪಾರೀಕರಣ ಮಾಡದೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಅವರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಈಡೇರಿಸಲು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳು ಯುವ ಜನತೆ ನಡೆಸುವ ಈ ಬೃಹತ್ ಹೋರಾಟಕ್ಕೆ ನಮ್ಮ ಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು.ಸಿದ್ದಾಪುರ ಘಟಕದ ಪ್ರಮುಖ ಕುಟ್ಟಪ್ಪ ಮಾತನಾಡಿ, ದೇಶದ ಯುವ ಜನತೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಅನ್ಯಾಯವಾಗುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಿ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪಕ್ಷದ ಪ್ರಮುಖರಾದ ಉದಯ ಕುಮಾರ್, ಸೌಕತ್ ಅಲಿ, ಅಬೀಬ್, ಚಂದ್ರ, ಭೋಜಿ, ಜೋಶ್, ಮುಸ್ತಫಾ, ಅಬ್ದುಲ್ ರಹಮಾನ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.