ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲೇ ಉಳಿದ ಕಂತಿನ ಹಣ : ರೆಡ್ಡಿ ಶ್ರೀನಿವಾಸ

| N/A | Published : Feb 20 2025, 12:45 AM IST / Updated: Feb 20 2025, 01:22 PM IST

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲೇ ಉಳಿದ ಕಂತಿನ ಹಣ : ರೆಡ್ಡಿ ಶ್ರೀನಿವಾಸ
Share this Article
  • FB
  • TW
  • Linkdin
  • Email

ಸಾರಾಂಶ

ಬಾಕಿ ಇರುವ ಗೃಹಲಕ್ಷ್ಮೀ ಯೋಜನೆಯ ಹಣ ಶೀಘ್ರ ಜಮೆಯಾಗಲಿದೆ. ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜನರಿಗೆ ಮಾಹಿತಿ ನೀಡಬೇಕು.

ಕೊಪ್ಪಳ:  ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲೇ ಉಳಿದ ಕಂತಿನ ಹಣ ಪಾವತಿಯಾಗಲಿದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಕಿ ಇರುವ ಗೃಹಲಕ್ಷ್ಮೀ ಯೋಜನೆಯ ಹಣ ಶೀಘ್ರ ಜಮೆಯಾಗಲಿದೆ. ಈ ಕುರಿತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜನರಿಗೆ ಮಾಹಿತಿ ನೀಡಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಹಕರ ಸೇವಾ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಬ್ಯಾಂಕ್ ಖಾತೆಯ ಹಣ ತೆಗೆದುಕೊಳ್ಳುತ್ತಾರೆ. ಇದಕ್ಕೆ ಕಮಿಷನ್‌ ಪಡೆಯುತ್ತಿದ್ದು ಇದನ್ನು ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ಗೃಹಲಕ್ಷ್ಮೀ ಹಣ ಪಾವತಿಗೆ ಬ್ಯಾಂಕ್‌ಗಳಲ್ಲಿನ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆ ಸರಿಪಡಿಸಲು ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್‌ ಉಳಿದ ಬ್ಯಾಂಕ್ ಅಧಿಕಾರಿಗಳ ಸಭೆ ಮಾಡಿ, ಅಗತ್ಯ ಕ್ರಮಕೈಗೊಳ್ಳಬೇಕು. ವಿದ್ಯುತ್ ಬಿಲ್ ಬಾಕಿ ವಸೂಲಾತಿ ವೇಳೆ ಜನರಲ್ಲಿ ಮಾನವಿಯತೆಯಿಂದ ವರ್ತಿಸುವಂತೆ ಜೆಸ್ಕಾಂ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ವಿತರಿಸಲು ನ್ಯಾಯಬೆಲೆ ಅಂಗಡಿಗಳು ಜನರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸುವ ಜತೆಗೆ ಸಕಾಲಕ್ಕೆ ವಿತರಿಸಬೇಕೆಂದು ಸೂಚಿಸಿದರು.

ಯುವನಿಧಿ ಯೋಜನೆಯಡಿ ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ನೋಂದಣಿಯಾಗಿದೆ. ಯುವಕರಿಗೂ ಸೌಲಭ್ಯ ಸಿಗಬೇಕೆಂಬುವುದು ಸರ್ಕಾರದ ಮುಖ್ಯ ಉದೇಶವಾಗಿದೆ. ಅರ್ಹ ಫಲಾನುಭವಿಗಳಿಗೆ ಜಾಗೃತಿ ಮೂಡಿಸಿ ಈ ಯೋಜನೆಯಡಿ ಇನ್ನೂ ಹೆಚ್ಚಿನ ನೋಂದಣಿಗೆ ಕ್ರಮಕೈಗೊಳ್ಳಬೇಕು ಎಂದರು.

ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪಡೆದು ಬದುಕು ಕಟ್ಟಿಕೊಂಡು, ಇತರರಿಗೆ ಮಾದರಿಯಾದ ಫಲಾನುಭವಿಗಳ ಯಶೋಗಾಥೆಗಳ ಮಾಹಿತಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ ಮಾತನಾಡಿ, ಕೊಪ್ಪಳ ಕೇಂದ್ರ ಬಸ್‌ ನಿಲ್ದಾಣದಲ್ಲಿರುವ ಶೌಚಾಲಯಗಳು ಸಾರ್ವಜನಿಕರ ಉಪಯೋಗಕ್ಕೆ ಯೋಗ್ಯವಿಲ್ಲ. ಅವುಗಳ ಸ್ವಚ್ಛತೆಗೆ ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದರು.

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಟಿ. ಖಾದ್ರಿ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ತಾಲೂಕು ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿದ್ದರು.