ಎಲ್ಲ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್

| Published : Sep 29 2025, 01:05 AM IST

ಎಲ್ಲ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್
Share this Article
  • FB
  • TW
  • Linkdin
  • Email

ಸಾರಾಂಶ

ಪರಿಹಾರ ಒದಗಿಸುವ ಕ್ರಮವನ್ನು ಕೈಗೊಂಡು ನಾಗರಿಕರಿಗೆ ಭರವಸೆ ಮೂಡಿಸಲಾಗುವುದು

ಹೊಸಪೇಟೆ: ಜನಸ್ಪಂದನಾ ಕಾರ್ಯಕ್ರಮ ಮೂಲಕ ಕೇವಲ ಸಾರ್ವಜನಿಕರ ಅಹವಾಲು ಕೇಳುವುದು ಮಾತ್ರವಲ್ಲದೇ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಕ್ರಮವನ್ನು ಕೈಗೊಂಡು ನಾಗರಿಕರಿಗೆ ಭರವಸೆ ಮೂಡಿಸಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ಏರ್ಪಡಿಸಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ‘ಜನ ಸ್ಪಂದನಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಕೆಲವೊಂದನ್ನು ಸ್ಥಳದಲ್ಲಿಯೇ ಪರಿಹರಿಸಿ ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ನಮೂದಿಸಿ ಮೊಬೈಲ್ ಮೂಲಕ ಅರ್ಜಿದಾರರನ್ನು ಸಂಪರ್ಕಿಸಿ ಪರಿಹಾರ ಒದಗಿಸಲಾಗುತ್ತದೆ. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್ ಬಳಿ ಅರ್ಜಿ ಸಲ್ಲಿಸಿದರೆ, ಇನ್ನು ಕೆಲವರು ನೇರವಾಗಿ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದರು. ಸ್ವತಃ ಸಚಿವರೇ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದರು. ಜಿಲ್ಲಾಧಿಕಾರಿ ಕೂಡ ಸ್ಥಳದಲ್ಲೇ ಇದ್ದು ಇದರ ಬಗ್ಗೆ ಮಾಹಿತಿ ಪಡೆದುಕೊಂಡರು.

ವಿವಿಧ ಇಲಾಖೆಯ ಕೌಂಟರ್ ಸ್ಥಾಪನೆ:

ಸಾರ್ವಜನಿಕರಿಂದ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ ಕೌಂಟರ್ ಸ್ಥಾಪಿಸಲಾಗಿತ್ತು. ಇಲಾಖಾವಾರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಸಿಬ್ಬಂದಿ ನಿಯೋಜಿಸಲಾಗಿತ್ತು. ಕಂದಾಯ ಇಲಾಖೆ ಸೇರಿದಂತೆ ಭೂದಾಖಲೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಅಬಕಾರಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜೆಸ್ಕಾಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಸಭೆ ಮತ್ತು ಸ್ಥಳೀಯ ಸಂಸ್ಥೆಗಳು, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರೇಷ್ಮೆ ಇಲಾಖೆ, ನಗರಸಭೆ, ಪುರಸಭೆಗಳ ಕೌಂಟರ್ ತೆರೆದು ಸಾರ್ವಜನಿಕರಿಂದ ಅರ್ಜಿ ಮತ್ತು ಅಹವಾಲುಗಳನ್ನು ಸ್ವೀಕರಿಸಿ ಕಂಪ್ಯೂಟರ್‌ನಲ್ಲಿ ನಮೂದಿಸಿ ಸ್ವೀಕೃತಿಯನ್ನು ಅರ್ಜಿದಾರರಿಗೆ ನೀಡಲಾಯಿತು.

ಜನತಾ ದರ್ಶನದಲ್ಲಿ ವಿವಿಧ ತಾಲೂಕಿನಿಂದ ಆಗಮಿಸಿದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್‌ಗಳ ಬಳಿ ತೆರಳಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಒಟ್ಟು 105 ಅರ್ಜಿಗಳನ್ನು ಸ್ವೀಕರಿಸಲಾಯಿತು. ಅವುಗಳಲ್ಲಿ 25 ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಯಿತು.

ಈ ವೇಳೆಯಲ್ಲಿ ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಮಂಜುನಾಥ, ಹೊಸಪೇಟೆ ಸಹಾಯಕ ಆಯುಕ್ತ ವಿವೇಕಾನಂದ, ಹರಪನಹಳ್ಳಿ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.