ಸಾರಾಂಶ
ಹಾವೇರಿ: ಪಂಚ ಗ್ಯಾರಂಟಿ ಯೋಜನೆಗಳಲ್ಲಿನ ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ತಿಳಿಸಿದರು.
ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ಆರೋಗ್ಯ ಸಮಸ್ಯೆಯಿಂದ ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗುವುದು ವಿಳಂಬವಾಗಿದೆ. ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಇನ್ನು ಮುಂದೆ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು. ಕಳಪೆ ಗುಣಮಟ್ಟದ ಜೋಳ ವಿತರಣೆ ಸ್ಥಗಿತಗೊಳಿಸಲಾಗಿದೆ. ಯುವನಿಧಿ ಯೋಜನೆಯಡಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಣ ನೀಡುವ ಬದಲು ತರಬೇತಿ ನೀಡಲು ಚಿಂತನೆ ಮಾಡಲಾಗುತ್ತಿದೆ ಎಂದರು.ಬೆಳಗಾವಿ ಕಂದಾಯ ವಿಭಾಗದ 7 ಜಿಲ್ಲೆಗಳಲ್ಲಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುತ್ತಿವೆ ಎಂದರು.
ಶಕ್ತಿ ಯೋಜನೆಯನ್ನು ಮಹಿಳೆಯರು ಸಮರ್ಪಕವಾಗಿ ಬಳಸಿಕೊಂಡಿರುವುದು ಅಂಕಿ- ಅಂಶಗಳಿಂದ ಸ್ಪಷ್ಟವಾಗಿದೆ. ಯೋಜನೆ ಜಾರಿಯಾದ ನಂತರ ಬಸ್‌ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಬಸ್ ಸಂಖ್ಯೆಗೆ ಅನುಗುಣವಾಗಿ ಚಾಲಕ- ನಿರ್ವಾಹಕ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ ಎಂದರು.ಶಕ್ತಿ ಯೋಜನೆ ಜಾರಿಯಾಗಿ ಮಹಿಳೆಯರು ಉಚಿತವಾಗಿ ಸಂಚರಿಸುತ್ತಿದ್ದರೂ ಸಾರಿಗೆ ಸಂಸ್ಥೆಗೆ ಯಾವುದೇ ಹಾನಿಯಾಗಿಲ್ಲ. ಸಂಸ್ಥೆಯ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಬೆಳಗಾವಿ ಕಂದಾಯ ವಿಭಾಗದ ವ್ಯಾಪ್ತಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಶೇ. 40ರಷ್ಟು ಹೆಚ್ಚಾಗಿದೆ. ಇದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಳೆದ ಒಂದೂವರೆ ವರ್ಷಗಳಲ್ಲಿ ₹3,900 ಕೋಟಿ ಆದಾಯ ಲಭಿಸಿದೆ ಎಂದರು.
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಪ್ರತಿದಿನ ಸರಾಸರಿ 24.87 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ. ಅದಕ್ಕೂ ಮೊದಲು 16.49 ಲಕ್ಷ ಮಂದಿ ಪ್ರಯಾಣಿಸುತ್ತಿದ್ದರು. ಮೊದಲು ಮಹಿಳಾ ಪ್ರಯಾಣಿಕರ ಸಂಖ್ಯೆ ಶೇ. 30ರಿಂದ 40ರಷ್ಟಿದ್ದರೆ ಈಗ ಶೇ. 60ಕ್ಕೆ ಏರಿಕೆಯಾಗಿದೆ ಎಂದರು.ಶಕ್ತಿ ಯೋಜನೆ ಪ್ರಾರಂಭದಿಂದ 2024ರ ಡಿಸೆಂಬರ್ ಅಂತ್ಯಕ್ಕೆ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ 84.10 ಕೋಟಿ ಮಹಿಳೆಯರು ಪ್ರಮಾಣ ಮಾಡಿದ್ದಾರೆ. ಟಿಕೆಟ್ ಮೊತ್ತ ₹2,158 ಕೋಟಿಗಳಾಗಿದೆ. ಜನವರಿ ತಿಂಗಳ ಅಂತ್ಯಕ್ಕೆ ₹1,819 ಕೋಟಿಗಳನ್ನು ರಾಜ್ಯ ಸರ್ಕಾರ ಸಂಸ್ಥೆಗೆ ಮರುಪಾವತಿ ಮಾಡಿದೆ ಎಂದರು.
ಶಕ್ತಿ ಯೋಜನೆ ಪ್ರಾರಂಭವಾದ ನಂತರ ವಾಯವ್ಯ ಸಾರಿಗೆ ಸಂಸ್ಥೆಗೆ 846 ಬಸ್‌ಗಳನ್ನು ಸೇರ್ಪಡೆ ಮಾಡಲಾಗಿದೆ. ಇನ್ನೂ 800 ಬಸ್ ಅವಶ್ಯಕತೆಯಿದೆ. ಹಾಗೆಯೇ ಹೊಸದಾಗಿ 1025 ಚಾಲಕರನ್ನು ಹೊರಗುತ್ತಿಗೆಯಲ್ಲಿ ನೇಮಕ ಮಾಡಲು ಮಂಡಳಿ ಅನುಮತಿ ದೊರೆತಿದೆ. 728 ನೌಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಉಳಿದ 297 ನೌಕರರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು. ಅಲ್ಲದೇ ಹಾವೇರಿ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ. ಹಿರೇಮಠ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ. ಮೈದೂರ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಉಪಸ್ಥಿತರಿದ್ದರು.