ಸಾರಾಂಶ
ಬೆಂಗಳೂರು : ರಾಜಧಾನಿ ಬೆಂಗಳೂರು, ದಕ್ಷಿಣ ಕನ್ನಡ ಸೇರಿ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಸಿಡಿಲಬ್ಬರದ ಭರಣಿ ಮಳೆಗೆ ಮೂವರು ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡದ ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿಯಲ್ಲಿ ಸೋಮಸುಂದರ್ (34) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ. ಮನೆಯಂಗಳದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದಾಗ ಅವರಿಗೆ ಸಿಡಿಲು ಬಡಿಯಿತು. 10 ದಿನಗಳ ಹಿಂದೆಯಷ್ಟೇ ಅವರು ಮದುವೆಯಾಗಿದ್ದರು. ಇದೇ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದಲ್ಲಿ ಕುರಿ ಮೇಯಿಸಲು ತೆರಳಿದ್ದ ರತ್ನಮ್ಮ(55) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಅಸ್ಸಾಂ ಕಾರ್ಮಿಕ ಪ್ರಮಾತ್ ಗರ್ಮಾನಿ (37) ಎಂಬುವರು ಅಸುನೀಗಿದ್ದಾರೆ.
ರಾಮನಗರದ ಹೊರವಲಯದ ಜಾನಪದ ಲೋಕದಲ್ಲಿ ನಿರ್ಮಿಸಿಲಾಗಿದ್ದ ಮಲೆ ಕುಡಿಯರ ಹಾಡಿ, ಸಿಡಿಲ ಬಡಿತಕ್ಕೆ ಭಸ್ಮಗೊಂಡಿದೆ. ಮಧ್ಯಾಹ್ನದ ನಂತರ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮಳೆ ನೀರು ಸಂಗ್ರಹಗೊಂಡು ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. ಕುಂಬಳಗೂಡಿನಲ್ಲಿ ಕಟ್ಟಡದ ಮೇಲಿದ್ದ ಬೃಹತ್ ಗಾತ್ರದ ಜಾಹೀರಾತು ಫಲಕವೊಂದು ಬಿರುಗಾಳಿಗೆ ಮುರಿದುಕೊಂಡು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ಮೇಲೆ ವಾಲಿಕೊಂಡು ನಿಂತಿತಾದರೂ, ಯಾವುದೇ ಅಪಾಯ ಸಂಭವಿಸಿಲ್ಲ. ಮೈಸೂರಿನಲ್ಲಿ ಸುರಿದ ಆಲಿಕಲ್ಲು ಮಳೆಗೆ ನೂರಾರು ಮರಗಳು ಧರೆಗುರುಳಿವೆ. ಇದೇ ವೇಳೆ, ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿಯೂ ಮಳೆಯಾದ ವರದಿಯಾಗಿದೆ.