ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

| Published : May 18 2025, 01:34 AM IST

ಸಾರಾಂಶ

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆ ಸುರಿಯಿತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆ ಸುರಿಯಿತು.

ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯ ವೇಳೆ ಸುರಿದ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಚಿನ್ನಸ್ವಾಮಿ ಸ್ಟೇಡಿಯಂ, ಚಿಕ್ಕಪೇಟೆ, ಶಿವಾನಂದ ಸರ್ಕಲ್‌, ಮೆಜೆಸ್ಟಿಕ್‌ ಸೇರಿದಂತೆ ಹಲವೆಡೆ ಮಳೆ ಸುರಿಯಿತು. ಮಳೆಯಿಂದಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಆರ್‌ಸಿಬಿ ಮತ್ತು ಕೋಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ ಐಪಿಎಲ್‌ ಪಂದ್ಯ ಕೆಲಕಾಲ ಸ್ಥಗಿತಗೊಂಡಿತ್ತು.

ಕಲಬುರಗಿ ಜಿಲ್ಲೆ ಹುಣಸಗಿ ತಾಲೂಕಿನ ಅರಕೇರಾ ಜೆ ಗ್ರಾಮದ ವ್ಯಾಪ್ತಿಯಲ್ಲಿ ಸಿಡಿಲು ಬಡಿದು ನಾಲ್ಕು ಕುರಿಗಳು ಹಾಗೂ ಒಂದು ಹೋತ ಮೃತಪಟ್ಟಿವೆ.

ಶೃಂಗೇರಿ ತಾಲೂಕಿನಾದ್ಯಂತ ಶನಿವಾರ ಉತ್ತಮ ಮಳೆಯಾಗಿದೆ. ಅಡಕೆ, ಕಾಫಿ ತೋಟಗಳಿಗೆ ಮಳೆಯಿಂದ ಅನುಕೂಲವಾಗಿದೆ ಎಂದು ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಕೊಪ್ಪ, ಮೂಡಿಗೆರೆ, ಎನ್‌.ಆರ್‌.ಪುರ, ತರೀಕೆರೆ, ಕಡೂರು ಸೇರಿ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಪ್ರದೇಶದಲ್ಲೂ ಮಳೆ ಸುರಿದಿದೆ.

ದಾವಣಗೆರೆಯಲ್ಲಿ ಸುಮಾರು 45 ನಿಮಿಷ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡವು. ಸುರಿವ ಮಳೆಯಲ್ಲೂ ನಗರದಲ್ಲಿ ತಿರಂಗಾ ಶೋಭಾಯಾತ್ರೆ ನಡೆಸಲಾಯಿತು. ಹಾವೇರಿಯಲ್ಲಿ ಸಂಜೆಯ ವೇಳೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಜನಸಾಮಾನ್ಯರು ಪರದಾಡುವಂತಾಯಿತು.