ಸಾರಾಂಶ
ನಮ್ಮ ದೇಶವನ್ನು ಬಾಲ್ಯವಿವಾಹ ಮುಕ್ತವನ್ನಾಗಿ ಮಾಡುವಲ್ಲಿ ಇಲಾಖೆಯ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಕೈ ಜೋಡಿಸಬೇಕು.
ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಕುಷ್ಟಗಿನಮ್ಮ ದೇಶವನ್ನು ಬಾಲ್ಯವಿವಾಹ ಮುಕ್ತವನ್ನಾಗಿ ಮಾಡುವಲ್ಲಿ ಇಲಾಖೆಯ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್. ಪೂಜೇರಿ ಹೇಳಿದರು.
ಪಟ್ಟಣದ ದೇವರಾಜು ಅರಸು ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಸೇರಿದಂತೆ ಸಂಬಂಧಪಟ್ಟ ಇಲಾಖೆಯ ನೌಕರರು ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಬಾಲ್ಯ ವಿವಾಹದಿಂದಾಗುವ ತೊಂದರೆಗಳು, ನಿಷೇಧ ಕಾಯ್ದೆಯ ಕುರಿತು ಅರಿವು ಮೂಡಿಸಬೇಕು. ಅಂದಾಗ ಮಾತ್ರ ಬಾಲ್ಯ ವಿವಾಹ ಕಡಿಮೆಯಾಗುತ್ತವೆ ಎಂದರು.ಸಮಾಜದಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡು ಬಂದರೆ ಮಕ್ಕಳ ಸಹಾಯವಾಣಿ ಅಥವಾ ಸಮೀಪದ ಪೊಲೀಸ್‌ಠಾಣೆ, ಅಂಗನವಾಡಿ ಅಥವಾ ಶಾಲೆಯ ಶಿಕ್ಷಕರಿಗೆ ತಿಳಿಸುವ ಮೂಲಕ ಬಾಲ್ಯವಿವಾಹ ತಡೆಗಟ್ಟಬಹುದಾಗಿದೆ. ಎಲ್ಲರೂ ಈ ಅಭಿಯಾನಕ್ಕೆ ಕೈ ಜೋಡಿಸಬೇಕು ಎಂದರು.
ಮೇಲ್ವಿಚಾರಕಿ ನಾಗಮ್ಮ ಗುಂಡೂರ ಮಾತನಾಡಿ, ಬಾಲ್ಯ ವಿವಾಹ ಎನ್ನುವುದು ಒಂದು ಸಾಮಾಜಿಕ ಪಿಡುಗಾಗಿದೆ. ಗಂಡು ಮಕ್ಕಳಿಗೆ 21 ವರ್ಷ, ಹೆಣ್ಣು ಮಕ್ಕಳಿಗೆ 18 ವರ್ಷ ತುಂಬಿದ ನಂತರ ಮದುವೆ ಮಾಡಬೇಕು. 18 ವರ್ಷಕ್ಕಿಂತ ಪೂರ್ವದಲ್ಲಿ ಹೆಣ್ಣು ಮಕ್ಕಳು ದೈಹಿಕ, ಮಾನಸಿಕವಾಗಿ ಸದೃಢವಾಗಿರುವುದಿಲ್ಲ. ಮದುವೆಯ ನಂತರ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದ್ದು, ಬಾಲ್ಯವಿವಾಹ ಮಾಡುವುದು ಕಂಡು ಬಂದರೆ ತಕ್ಷಣ ಮಾಹಿತಿ ನೀಡಬೇಕು ಎಂದರು.ದೋಟಿಹಾಳ ಅಂಗನವಾಡಿ ಮೇಲ್ವಿಚಾರಕಿ ಅನ್ನಪೂರ್ಣ ಎಂ. ಪಾಟೀಲ ಪ್ರತಿಜ್ಞಾ ವಿಧಿ ಬೋಧಿಸಿದರು. ವಕೀಲರ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ, ಅಪರ ಸರ್ಕಾರಿ ವಕೀಲ ಪರಸಪ್ಪ ಗುಜಮಾಗಡಿ ಇತರರು ಮಾತನಾಡಿದರು. ಈ ಸಂದರ್ಭ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ, ಸಹಾಯಕ ಸರ್ಕಾರಿ ಅಭಿಯೋಜಕ ಎಲ್. ರಾಯನಗೌಡ, ಸಿಆರ್‌ಪಿ ದಂಡಪ್ಪ ಹೊಸಮನಿ, ಜ್ಯೋತಿ ಕುಂಬಾರ, ಸುನಿಲಕುಮಾರ ಸೇರಿದಂತೆ ಅಂಗನವಾಡಿ ಶಿಕ್ಷಕಿಯರು ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.