ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಕೇವಲ ಚುನಾವಣಾ ಆಯೋಗದ ಕೆಲಸ ಎಂದು ಭಾವಿಸದೆ, ಅದು ನಮ್ಮ ಹಕ್ಕು ಎಂದು ಪರಿಗಣಿಸಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಯಶಸ್ವಿಗೊಳಿಸಬೇಕೆಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಬಿಜೆಪಿ ಬಾಗಲಕೋಟೆ ವತಿಯಿಂದ ಮಂಗಳವಾರ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಹಾಗೂ ಬಿಎಲ್ಎ-2 ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೂತ್ ಮಟ್ಟದಿಂದ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಮಂಡಲಗಳವರೆಗೆ ಎಸ್ಐಆರ್ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ, ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಅಪಪ್ರಚಾರದ ಬಗ್ಗೆಯೂ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದರು.ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ಮತದಾರರ ಪಟ್ಟಿಯನ್ನು ನಿಖರ ಮತ್ತು ದೋಷರಹಿತವಾಗಿಸಲು ಕಾರ್ಯಕರ್ತರು ಶ್ರಮಿಸಬೇಕು. ಪ್ರತಿ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ವೇದಿಕೆಯಲ್ಲಿ ಬಸವರಾಜ ಯಂಕಂಚಿ, ಜಿಲ್ಲಾ ಪ್ರಧಾನ ಕಾರ್ಯಧರ್ಶಿ ರಾಜು ನಾಯ್ಕರ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೋಣ್ಣುರ, ರಾಜು ಮುದೆನೂರ, ಶಶಿಕುಮಾರ ಗಟ್ಟೆನ್ನವರ, ಮಲ್ಲು ಮುತ್ತಪ್ಪನ್ನವರ ಉಪಸ್ಥಿತರಿದ್ದರು.

ತರಬೇತಿ ಕಾರ್ಯಕ್ರಮದಲ್ಲಿ ಬಿಜೆಪಿ ಪದಾಧಿಕಾರಿಗಳು, ಬಿಎಲ್ಎಗಳು, ಕಾರ್ಯಕರ್ತರು ಹಾಗೂ ವಿವಿಧ ಮಂಡಲಗಳ ಮುಖಂಡರು ಭಾಗವಹಿಸಿದ್ದರು..