ಮಕ್ಕಳ ರಕ್ಷಣೆಗಿರುವ ಕಾನೂನು ಕುರಿತು ಶಾಲೆಗಳಲ್ಲಿ ಜಾಗೃತಿ ಮೂಡಿಸಿ: ಶಶಿಧರ್‌ ಕೊಸಂಬೆ

| Published : Jan 21 2025, 12:30 AM IST

ಮಕ್ಕಳ ರಕ್ಷಣೆಗಿರುವ ಕಾನೂನು ಕುರಿತು ಶಾಲೆಗಳಲ್ಲಿ ಜಾಗೃತಿ ಮೂಡಿಸಿ: ಶಶಿಧರ್‌ ಕೊಸಂಬೆ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಪ್ರತಿ ಶಾಲೆಯಲ್ಲಿ ಜಾಗೃತಿ ಮೂಡಿಸಬೇಕು.

ಹೊಸಪೇಟೆ: ಆರ್‌ಟಿಇ ಮಕ್ಕಳ ಶಿಕ್ಷಣ ಹಕ್ಕಾಗಿದೆ. ಜೊತೆಗೆ ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಪ್ರತಿ ಶಾಲೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ ಹೇಳಿದರು.ನಗರದ ಜಿಪಂ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು,

ಶಾಲೆಯಿಂದ ಹೊರ ಉಳಿದ 3200 ಮಕ್ಕಳನ್ನು ಪುನಃ ಶಾಲೆಗೆ ಕರೆತರುವಲ್ಲಿ ಶಿಕ್ಷಣ ಇಲಾಖೆ ತಳ ಮಟ್ಟದ ಅಧಿಕಾರಿಗಳು ಕೆಲಸ ಮಾಡುವ ಮೂಲಕ ಮಕ್ಕಳಿಗೆ ಶೈಕ್ಷಣಿಕ, ಸಾಮಾಜಿಕವಾಗಿ ಬೆಳವಣಿಗೆಗೆ ಸಹಕಾರಿಯಾಗಬೇಕು. ಶಾಲೆಯಲ್ಲಿ ಮಕ್ಕಳಿಗೆ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿ ಅಗತ್ಯವಿರುವ ಶೌಚಾಲಯ, ಆಟದ ಮೈದಾನ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು. ಮಕ್ಕಳ ರಕ್ಷಣಾ ನೀತಿ 2016ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಅಣಿಯಾಗಬೇಕು. ಮಕ್ಕಳ ಸುರಕ್ಷಾ ಸಮಿತಿ, ಮಕ್ಕಳ ಹಕ್ಕುಗಳ ಸಂಘ, ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112, ಮಕ್ಕಳ ಸಮಸ್ಯೆಗಳಿಗೆ ಬರವಣಿಗೆ ಮೂಲಕ ಸಲಹಾ ಪೆಟ್ಟಿಗೆಗಳು ಅಳವಡಿಸುವ ಮೂಲಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ತಿಳಿಸಿದರು.

ಸ್ಯಾಟ್ಸ್ ನಿಂದ ಕೇಂದ್ರ ಸರ್ಕಾರದ ಅಪಾರ ತಂತ್ರಾಂಶದಲ್ಲಿ ಬಾಕಿ ಉಳಿದಿರುವ ಮಕ್ಕಳ ದಾಖಲಾತಿಯನ್ನು ಒಂದು ತಿಂಗಳೊಳಗಾಗಿ ದಾಖಲಿಸಬೇಕು. ಜಿಲ್ಲೆಯಲ್ಲಿ 88 ಬಾಲ್ಯ ವಿವಾಹ ನಡೆದಿದ್ದು, 67 ಪ್ರಕರಣ ದಾಖಲಿಸಲಾಗಿದೆ. ಉಳಿದ 21 ಪ್ರಕರಣಗಳು ಯಾವ ಕಾರಣಕ್ಕಾಗಿ ದಾಖಲಿಸಿಲ್ಲ, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಒಂದು ವಾರದೊಳಗೆ ದಾಖಲಿಸಬೇಕು. ವಿಫಲರಾದ ಅಧಿಕಾರಿಗಳ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಕ್ಕಳಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಸಂಬಂಧಪಟ್ಟ ಸಿಆರ್‌ಪಿ ಮತ್ತು ಮುಖ್ಯ ಗುರುಗಳ ಸಭೆ ಕರೆಯುವ ಮೂಲಕ ಮಾಹಿತಿ ಪಡೆದುಕೊಂಡು ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥಾಪಕರಿಂದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು. ಅಕಾಲಿಕವಾಗಿ ಮರಣ ಹೊಂದುವ ವಿದ್ಯಾರ್ಥಿಗಳ ಕುಟುಂಬದವರಿಗೆ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಯಿಂದ ಪರಿಹಾರವನ್ನು ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ ರಾಮಚಂದ್ರಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.