ಜನಸಂಖ್ಯೆ ನಿಯಂತ್ರಣದ ಅರಿವು ಮೂಡಿಸಿ: ರಾಹುಲ್ ರತ್ನಂ ಪಾಂಡೆಯ

| Published : Jul 17 2024, 12:57 AM IST

ಸಾರಾಂಶ

ಜನರಲ್ಲಿ ಜನಸಂಖ್ಯೆ ನಿಯಂತ್ರಣದ ಕುರಿತು ಅರಿವು ಮೂಡಿಸುವ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು.

ಗಂಗಾವತಿಯಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ನಿಯಂತ್ರಣ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ

ಕನ್ನಡಪ್ರಭ ವಾರ್ತೆ ಗಂಗಾವತಿ

ಜನರಲ್ಲಿ ಜನಸಂಖ್ಯೆ ನಿಯಂತ್ರಣದ ಕುರಿತು ಅರಿವು ಮೂಡಿಸುವ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ರತ್ನಂ ಪಾಂಡೆಯ ಹೇಳಿದರು.

ನಗರದ ಉಪವಿಭಾಗ ಆಸ್ಪತ್ರೆಯ ಎಸ್ ಡಿಎಚ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಕೊಪ್ಪಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ನಿಯಂತ್ರಣ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರಿಗೆ ಜನಸಂಖ್ಯೆ ನಿಯಂತ್ರಣದ ಕುರಿತು ಅರಿವು ಮೂಡಿಸಬೇಕು. ಕುಟುಂಬ ಕಲ್ಯಾಣ ಯೋಜನೆ, ವಿಧಾನಗಳ ಬಗ್ಗೆ ತಿಳಿ ಹೇಳಬೇಕು. ಎಲ್ಲ ವಯೋಮಾನದವರಿಗೂ ಆರೋಗ್ಯ ಸೌಲಭ್ಯಗಳನ್ನು ತಲುಪಿಸುವ ಕೆಲಸವಾಗಲಿ ಎಂದರು.

ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ತಾತ್ಕಾಲಿಕ ವಿಧಾನದಲ್ಲಿ (ಪಿಪಿಐಯುಸಿಡಿ) ಇದರಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದಕ್ಕೆ ಜಿಪಂ ಸಿಇಒ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಗತಿ ಪರಿಶೀಲನೆ ಸಭೆ:ಬಳಿಕ ಡೆಂಘೀ ನಿಯಂತ್ರಣ, ಆರ್‌ಸಿಎಚ್ ತಾಯಿ- ಮಕ್ಕಳ ಆರೋಗ್ಯ ಕಾರ್ಯಕ್ರಮ, ಕುಟುಂಬ ಕಲ್ಯಾಣ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆಯನ್ನು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ನಡೆಸಿದರು. ಆಶಾ ಕಾರ್ಯಕರ್ತರು, ಕ್ಷೇತ್ರ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಲಾರ್ವಾ ಸಮೀಕ್ಷೆ ನಡೆಸಿ, ಡೆಂಘೀ ಜ್ವರ ನಿಯಂತ್ರಿಸುವ ಕೆಲಸ ಆಗಬೇಕು ಎಂದು ಸೂಚಿಸಿದರು.

ಗಂಗಾವತಿ ನಗರದ ತಾಯಿ ಮಕ್ಕಳ ಆಸ್ಪತ್ರೆಗೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಭೇಟಿ ನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು.

ಡಿಎಚ್ ಒ ಡಾ. ಲಿಂಗರಾಜು ಟಿ., ಜಿಲ್ಲಾ ಆರ್ ಸಿಎಚ್ ಅಧಿಕಾರಿಗಳಾದ ಡಾ. ಪ್ರಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವೀಂದ್ರನಾಥ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಂದಕುಮಾರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿ ಡಾ. ಶಶಿಧರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ವೆಂಕಟೇಶ, ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಈಶ್ವರ ಸವಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಪ್ರಕಾಶ ಎಚ್., ತಾಲೂಕು ಆರೋಗ್ಯ ಅಧಿಕಾರಿ ಡಾ. ಗೌರಿಶಂಕರ್, ಡಾ. ಆನಂದ, ಡಾ. ರಾಮಾಂಜನೇಯ, ಡಾ. ಅಮರೇಶ, ಜಿಲ್ಲೆಯ ಎಲ್ಲ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು, ವಿವಿಧ ವೃಂದದ ಅಧಿಕಾರಿಗಳು, ಸಿಬ್ಬಂದಿ ಇದ್ದರು.