ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಬೇಕು ಮತ್ತು ಮಧ್ಯವರ್ತಿಗಳ ಮೋಸ ತಡೆಗಟ್ಟಲು ಜಾಗೃತಿ ಮೂಡಿಸಬೇಕು.

ಬಳ್ಳಾರಿ: ಎಪಿಎಂಸಿಯಲ್ಲಿ ಎಷ್ಟು ಏಜೆನ್ಸಿಗಳಿವೆ,ಎಷ್ಟು ವಿಸ್ತೀರ್ಣವಿದೆ, ಒಟ್ಟು ಆದಾಯ ಹಾಗೂ ಖರ್ಚು-ವೆಚ್ಚ,ಸಿಬ್ಬಂದಿ ವೇತನ ಮತ್ತು ಬಾಕಿ ಹಣದ ಬಗ್ಗೆ ಸಮಗ್ರ ವರದಿ ನೀಡಬೇಕು. ಪ್ರತ್ಯೇಕ ಖಾತೆ ನಿರ್ವಹಿಸಿ, ಎಲ್ಲ ಹಣಕಾಸಿನ ದಾಖಲೆ ಒದಗಿಸುವಂತೆ ಸಂಸದ ಈ.ತುಕಾರಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ದಿಶಾ ಸಮಿತಿಯ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಬೇಕು ಮತ್ತು ಮಧ್ಯವರ್ತಿಗಳ ಮೋಸ ತಡೆಗಟ್ಟಲು ಜಾಗೃತಿ ಮೂಡಿಸಬೇಕು. ಸಂಡೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಆಸ್ತಿ ವಿವಾದ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಬಳ್ಳಾರಿ ನಗರದಲ್ಲಿ ಸಾಕಷ್ಟು ಅಪಘಾತಗಳು ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಸೂಕ್ತ ಸ್ಥಳಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು. ನಗರದಲ್ಲಿ ಅಪಘಾತ ವಲಯ ಸ್ಥಳಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ಕ್ಯಾಮೆರಾ ಅಳವಡಿಕೆಗೆ ಡಿಎಂಎಫ್ ಮೂಲಕ ಅನುದಾನ ಒದಗಿಸಲಾಗುವುದು. ಇದಕ್ಕೆ ಬೇಕಾದ ಸಮಗ್ರ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಂಸದರು, ಎಸ್ಪಿಗೆ ತಿಳಿಸಿದರು. ಸಾರ್ವಜನಿಕರನ್ನು ವಂಚಿಸುವ ಅಥವಾ ದಾರಿ ತಪ್ಪಿಸುವ ಪ್ರಕರಣಗಳ ಬಗ್ಗೆ ಎಚ್ಚರವಹಿಸುವ ಅಗತ್ಯವಿದೆ.ಯಾರೂ ಮೋಸದ ಜಾಲಕ್ಕೆ ಬೀಳದಂತೆ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.

ರಾಜ್ಯದಲ್ಲಿ ಪ್ರಸ್ತುತ ವರ್ಷ ಭೀಕರ ಬರಗಾಲ ಆವರಿಸಿದ್ದು, ಬೆಳೆ ನಷ್ಟದ ಜತೆಗೆ ಕುಡಿಯುವ ನೀರಿಗೂ ತೀವ್ರ ಹಾಹಾಕಾರ ಎದುರಾಗಿದೆ.ಇಂತಹ ಸಂಕಷ್ಟದ ಸಮಯದಲ್ಲಿ ರೈತರು ಧೃತಿಗೆಡದಂತೆ ಅವರಲ್ಲಿ ಧೈರ್ಯ ತುಂಬುವ ಕೆಲಸವಾಗಬೇಕು. ಇದಕ್ಕಾಗಿ ತಾಲೂಕು ಮಟ್ಟದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ರೈತರಲ್ಲಿ ಮನೋಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಜಾನುವಾರುಗಳ ಕುಡಿಯುವ ನೀರಿನ ತೊಟ್ಟಿಗಳ ಬಳಿ ಬಟ್ಟೆ ಒಗೆಯುವುದು, ಸೋಪ್ ಬಳಸುವುದು ಮಾಡದಂತೆ ಜಾಗೃತಿ ಮೂಡಿಸಬೇಕು ಎಂದು ಪಶುಸಂಗೋಪನಾಧಿಕಾರಿಗಳಿಗೆ ತಿಳಿಸಿದ ಅವರು, ಇದರಿಂದ ನೀರು ಕಲುಷಿತಗೊಂಡು ಜಾನುವಾರುಗಳಿಗೆ ಕ್ಯಾನ್ಸರ್ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳು ಬರುವ ಅಪಾಯವಿರುತ್ತದೆ ಎಂದರು.

ಅರಣ್ಯ ವ್ಯಾಪ್ತಿಯಲ್ಲಿ ಬಿದ್ದಿರುವ ಮಳೆಯಲ್ಲಿಯೇ ಹಸಿರು ಮೇವು ಬೆಳೆದಿದೆ.ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಲಭ್ಯವಿರುವ ಮೇವನ್ನು ಸಂರಕ್ಷಿಸುವ ಕೆಲಸ ಮಾಡಬೇಕು. ಬೆಂಕಿಗೆ ಆಹುತಿಯಾಗದಂತೆ ನೋಡಿಕೊಳ್ಳಬೇಕು ಎಂದು ಅರಣ್ಯ ಇಲಾಖಾಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ವ್ಯಾಪ್ತಿಯ ರೈಲ್ವೆ ಕಾಮಗಾರಿಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದ ಸಂಸದ ಈ.ತುಕಾರಾಮ್ , ಬಳ್ಳಾರಿ ಭಾಗದ ಸಮಸ್ಯೆ ಆದ್ಯತೆಯ ಮೇರೆಗೆ ಇತ್ಯರ್ಥಪಡಿಸಲು ಒತ್ತು ನೀಡಬೇಕು ಎಂದು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಂಡೂರು ಶಾಸಕಿ ಈ. ಅನ್ನಪೂರ್ಣ ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ತೃತೀಯ ಲಿಂಗಿ ಮುಖ್ಯ ವಾಹಿನಿಗೆ ತರುವ ಕೆಲಸವಾಗಬೇಕು. ಅವರನ್ನು ನಿರಂತರ ಸಂಪರ್ಕದಲ್ಲಿಟ್ಟುಕೊಂಡು ಕಾಲಾನುಸಾರ ಅವರನ್ನು ಆಪ್ತಸಮಾಲೋಚನೆಗೆ ಒಳಪಡಿಸಬೇಕು. ಅವರಲ್ಲಿ ಶಿಕ್ಷಣದ ಅರಿವು ಮೂಡಿಸಬೇಕು. ಇದರಿಂದ ಅವರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುತ್ತದೆ. ಅದೇ ರೀತಿ ಜಿಲ್ಲೆಯಲ್ಲಿನ ದೇವದಾಸಿ ಮಹಿಳೆಯರಿಗೆ, ವಿಧವಾ ಮಹಿಳೆಯರಿಗೆ ಮತ್ತು ಹಿರಿಯ ನಾಗರಿಕರಿಗೆ ನಿಗದಿತ ಅವಧಿಯೊಳಗೆ ಸರ್ಕಾರಿ ಸೌಲಭ್ಯ ತಲುಪಿಸುವ ಕಾರ್ಯ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್, ಎಸ್ಪಿ ಡಾ.ಸುಮನ್ ಡಿ.ಪೆನ್ನೇಕರ್, ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್ ಬಸವರಾಜ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.