ಮಕ್ಕಳ ಹಕ್ಕು, ಆರೈಕೆ, ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಿ

| Published : Nov 18 2025, 01:15 AM IST

ಸಾರಾಂಶ

ಜವಾಹರಲಾಲ್ ನೆಹರು ಅವರ ಜನ್ಮದಿನದ ಸವಿನೆನಪಿಗಾಗಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ.

ಬಳ್ಳಾರಿ: ಮಕ್ಕಳನ್ನು ದೇಶದ ಭವಿಷ್ಯದ ಶಿಲ್ಪಿಗಳಾಗಿ ಮಾಡುವುದು ಪೋಷಕರು, ಶಿಕ್ಷಕರು ಮತ್ತು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ

ದತ್ತು ಮಾಸಾಚರಣೆ ಪ್ರಯುಕ್ತ ನಗರದ ಕಂಟೋನ್ ಮೆಂಟ್ ನ ಪ್ರದೇಶದ ಶಾಂತಿಧಾಮ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಮತ್ತು ನಾಮಕರಣ ಶಾಸ್ತ್ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜವಾಹರಲಾಲ್ ನೆಹರು ಅವರ ಜನ್ಮದಿನದ ಸವಿನೆನಪಿಗಾಗಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ. ದೇಶದ ಪ್ರತಿ ಮಗುವಿಗೂ ಪ್ರೀತಿ, ಸುರಕ್ಷತೆ, ಶಿಕ್ಷಣ ನೀಡುವುದು ಮಕ್ಕಳ ದಿನಾಚರಣೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳು ಹೂಗಳಿದ್ದಂತೆ, ಅವುಗಳನ್ನು ಬಾಡದಂತೆ ನೋಡಿಕೊಳ್ಳಬೇಕು. ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರು ಮಾತನಾಡಿ, ಮಕ್ಕಳು ಮುಕ್ತವಾಗಿ, ಆತ್ಮವಿಶ್ವಾಸದಿಂದ ಬೆಳೆಯಲು ಮತ್ತು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಪ್ರೋತ್ಸಾಹಿಸಬೇಕು. ಪ್ರತಿಯೊಂದು ಮಗುವೂ ಕಲಿಯಲು, ಬೆಳೆಯಲು ಪೂರಕ ವಾತಾವರಣ ಕಲ್ಪಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಅಮೂಲ್ಯ ವಿಶೇಷ ದತ್ತು ಸಂಸ್ಥೆಯ ಒಂದು ತಿಂಗಳ ಗಂಡು ಮಗುವಿಗೆ ನಾಮಕರಣ ಶಾಸ್ತ್ರ ಮಾಡಲಾಯಿತು. ನಂತರ ಸರ್ಕಾರಿ ಬಾಲಕರ, ಬಾಲಕಿಯರ ಸಂಸ್ಥೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಸಂಸ್ಥೆಯಲ್ಲಿರುವ ಮಕ್ಕಳಿಗೆ ಕ್ರೀಡಾಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಚಟುವಟಿಕೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ, ಪ್ರಮಾಣ ಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರುಗಳಾದ ಚಟ್ಲ ವೆಂಕಟೇಶ್, ಎಫ್.ಗೌಸಿಯಾ, ಮಕ್ಕಳ ಪಾಲನಾ ಸಂಸ್ಥೆಯ ಅಧೀಕ್ಷಕರುಗಳಾದ ನಾಗವೇಣಿ, ಗುರುಬಸವರಾಜ್ ಹೆಚ್.ಡಿ., ಬಿ.ಹುಲುಗಪ್ಪ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿ-ಸಿಬ್ಬಂದಿಗಳು ಹಾಗೂ ಸಂಸ್ಥೆಯ ಮಕ್ಕಳು ಉಪಸ್ಥಿತರಿದ್ದರು.

ಮಕ್ಕಳ ರಕ್ಷಣಾಧಿಕಾರಿ (ಸಾಂಸ್ಥಿಕ ಸೇವೆ) ದೊಡ್ಡನಗೌಡ ಮಂಜುನಾಥ ನಿರೂಪಿಸಿದರು.