ಪ್ರಚಾರಕ್ಕೆ ಬರುವ ಎಚ್ಡಿಕೆಗೆ ಮುತ್ತಿಗೆ ಹಾಕಲು ನಿರ್ಧಾರ

| Published : Apr 16 2024, 01:02 AM IST

ಸಾರಾಂಶ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಜನಜಾಗೃತಿ ಸಂಘಟನೆಯ ರಾಜ್ಯಾಧ್ಯಕ್ಷೆ ಚಿನ್ನೇನಹಳ್ಳಿ ನಾಗರತ್ನಮ್ಮ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ರೈತ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಜನಜಾಗೃತಿ ಸಂಘಟನೆಯ ಚಿನ್ನೇನಹಳ್ಳಿ ನಾಗರತ್ನಮ್ಮ ಮಾಹಿತಿ । ಪ್ರತಿಭಟನೆ ಎಚ್ಚರಿಕೆ

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಏ.೧೯ರ ಬುಧವಾರ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಪಟ್ಟಣಕ್ಕೆ ಆಗಮಿಸುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಜನಜಾಗೃತಿ ಸಂಘಟನೆಯ ರಾಜ್ಯಾಧ್ಯಕ್ಷೆ ಚಿನ್ನೇನಹಳ್ಳಿ ನಾಗರತ್ನಮ್ಮ ತಿಳಿಸಿದರು.

ಪಟ್ಟಣದ ರೈತ ಸಂಘದ ಕಚೇರಿಯಲ್ಲಿ ರೈತ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ದಾರಿ ತಪ್ಪುತ್ತಿರುವುದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯೇ ಹೊರತು ಮಹಿಳೆಯರಲ್ಲ. ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಎಚ್.ಡಿ.ಕುಮಾರಸ್ವಾಮಿಗೆ ಸೋಲುವ ಭೀತಿ ಎದುರಾಗಿದೆ, ಇದರಿಂದ ಹತಾಶೆಗೆ ಒಳಗಾದ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಪದೇ ಪದೇ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

ಕೆಲವು ವರ್ಷಗಳ ಹಿಂದೆ ಬೆಳಗಾಂ ಅಧಿವೇಶನ ನಡೆದ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ರೈತ ಹೋರಾಟಗಾತಿಯ ಬಗ್ಗೆ ಇಷ್ಟು ದಿನ ಎಲ್ಲಿ ಮಲಗಿದ್ದಮ್ಮ ಎಂದು ಹಗುರವಾಗಿ ಮಾತನಾಡಿ ಇಡೀ ಮಹಿಳಾ ಸಮಾಜಕ್ಕೆ ಅವಮಾನ ಮಾಡಿದರು, ಕಳೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದ ಸುಮಲತಾ ಬಗ್ಗೆ ಇದೇ ಎಚ್.ಡಿ.ಕುಮಾರಸ್ವಾಮಿ ಅಣ್ಣನಾದ ಎಚ್.ಡಿ.ರೇವಣ್ಣ, ಗಂಡ ಸತ್ತ ಮುಂಡೆಗೆ ಚುನಾವಣೆ ಬೇಕಾ ಎಂದು ಹಗುರವಾಗಿ ಮಾತನಾಡಿ ತಕ್ಕ ಶಾಸ್ತಿಯನ್ನು ಮಾಡಿಸಿಕೊಂಡಿದ್ದಾರೆ ಎಂದು ದೂರಿದರು.

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ನೀಡಿ, ಕರ್ನಾಟಕ ರಾಜ್ಯದ ಮಹಿಳಾ ಕುಲಕ್ಕೆ ಎಚ್‌.ಡಿ.ಕುಮಾರಸ್ವಾಮಿ ಅವಮಾನ ಮಾಡಿದ್ದಾರೆ, ಇವರು ಈ ಕೂಡಲೇ ಮಹಿಳೆಯರನ್ನು ಬಹಿರಂಗ ಸಭೆಯಲ್ಲಿ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಕರ್ನಾಟಕ ರಾಜ್ಯ ರೈತ ಸಂಘದ ಮಹಿಳಾ ವಿಭಾಗದಿಂದ ರಾಜ್ಯದ್ಯಂತ ಕುಮಾರಸ್ವಾಮಿ ವಿರುದ್ಧ ಉಗ್ರವಾದ ಹೋರಾಟವನ್ನು ಮಹಿಳಾ ಪರ ಸಂಘಟನೆಗಳು ನಡೆಸಲಿವೆ ಎಂದು ಎಚ್ಚರಿಸಿದರು.

ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಖಂಡಿಸಿ ರೈತ ಸಂಘದ ಸದಸ್ಯರು ಚನ್ನರಾಯಪಟ್ಟಣದಲ್ಲಿ ಸಭೆ ನಡೆಸಿ ಪ್ರತಿಭಟನೆ ನಡೆಸಿದರು.