ಬೇಡಿಕೆಗಳ ಈಡೇರಿಕೆಗೆ ರೈತ ಸಂಘ ಒತ್ತಾಯ

| Published : Jun 21 2024, 01:05 AM IST

ಸಾರಾಂಶ

ಚನ್ನಪಟ್ಟಣ: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಿತ್ತನೆ ಬೀಜದ ಕೊರತೆ, ಕೃಷಿ ಕೊಳವೆ ಬಾವಿಗಳ ವಿದ್ಯುತ್ ಸಂಪರ್ಕಕ್ಕೆ ವಿಧಿಸುತ್ತಿರುವ ದುಬಾರಿ ಶುಲ್ಕ, ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಭ್ರಷ್ಟಾಚಾರ ತಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ರೈತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು.

ಚನ್ನಪಟ್ಟಣ: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಿತ್ತನೆ ಬೀಜದ ಕೊರತೆ, ಕೃಷಿ ಕೊಳವೆ ಬಾವಿಗಳ ವಿದ್ಯುತ್ ಸಂಪರ್ಕಕ್ಕೆ ವಿಧಿಸುತ್ತಿರುವ ದುಬಾರಿ ಶುಲ್ಕ, ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಭ್ರಷ್ಟಾಚಾರ ತಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ರೈತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿದ ರೈತ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಡೀಸೆಲ್ ಬೆಲೆ ಏರಿಕೆಯಿಂದ ಉಳುಮೆ ಮಾಡುವ ಟ್ರ್ಯಾಕ್ಟರ್ ಬಾಡಿಗೆ ದುಬಾರಿಯಾಗಿದೆ. ಇದರಿಂದ ರೈತರು ಕೃಷಿ ಚಟುವಟಿಕೆ ನಡೆಸಲು ಅನನುಕೂಲವಾಗಿದೆ. ಇದರ ಜತೆಗೆ ಭಿತ್ತನೆ ಬೀಜದ ಕೊರತೆ ಸಹ ಎದುರಾಗಿದ್ದು, ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮನ್ನಾಳುವ ಸರ್ಕಾರಗಳು ಸಂಕಷ್ಟಕ್ಕೆ ಸಿಲುಕಿರುವ ರೈತ ಸಮುದಾಯದ ಕತ್ತು ಹಿಸುಕುವ ಕೆಲಸ ಮಾಡುತ್ತಿವೆ. ಕಳೆದ ಒಂದೂವರೆ ವರ್ಷದಿಂದಲೂ ರೈತರ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದೆ ಸತಾಯಿಸಲಾಗುತ್ತಿದೆ. ರೈತರ ಜಮೀನುಗಳ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಇದರ ಜತೆಗೆ ಬರ ಪರಿಹಾರವನ್ನು ಸರಿಯಾಗಿ ಬಿಡುಗಡೆ ಮಾಡದೆ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಸರ್ಕಾರ ಸಂಕಷ್ಟದಲ್ಲಿರುವ ರೈತ ಸಮುದಾಯದ ಹಿತಕಾಯುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ರೈತರ ಪಾಲಿಗೆ ಮಾರಕವಾಗಿರುವ ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯಬೇಕು. ವಾಲ್ಮಿಕಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ನಟ ದರ್ಶನ್‌ರಿಂದ ಹತ್ಯೆಗೊಳಗಾಗಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರಕಿಸುವ ಜತೆಗೆ ಒಂದು ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ತಹಸೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತಸಂಘದ ವಿಭಾಗೀಯ ಉಪಾಧ್ಯಕ್ಷ ಆಣಿಗೆರೆ ಮಲ್ಲಯ್ಯ, ರೈತಸಂಘದ ತಾಲೂಕು ಅಧ್ಯಕ್ಷ ರಾಮೇಗೌಡ, ಮುಖಂಡರಾದ ಕೆ.ಎನ್.ರಾಜು, ಪುಟ್ಟಸ್ವಾಮಿ, ನಾಗರಾಜು ಸೇರಿದಂತೆ ರೈತಸಂಘದ ಪದಾಧಿಕಾರಿಗಳು ಇತರರಿದ್ದರು.

ಪೋಟೊ೨೦ಸಿಪಿಟಿ೫:

ಚನ್ನಪಟ್ಟಣದ ತಾಲೂಕು ಕಚೇರಿ ಮುಂದೆ ರೈತಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಗಾಗಿ ಪ್ರತಿಭಟನೆ ನಡೆಸಿದರು.