ಸಾರಾಂಶ
ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಸ್ವಕ್ಷೇತ್ರ ಮಧುಗಿರಿಯಲ್ಲಿ ಮಂಗಳವಾರ ಬಂದ್ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಮಧುಗಿರಿ
ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಸ್ವಕ್ಷೇತ್ರ ಮಧುಗಿರಿಯಲ್ಲಿ ಮಂಗಳವಾರ ಬಂದ್ ಆಚರಿಸಲಾಯಿತು. ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಅಭಿಮಾನಿಯೊಬ್ಬ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರೆ, ಮತ್ತೊಬ್ಬ ಅಭಿಮಾನಿ ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾದ ಘಟನೆ ನಡೆಯಿತು.ವಜಾ ಆದೇಶ ಹಿಂಪಡೆಯಲು ಆಗ್ರಹ:
ಪಟ್ಟಣದ ಎಂಎನ್ಕೆ ಸಮುದಾಯ ಭವನದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ರಾಜಣ್ಣ ಪರ ಜಯಘೋಷ ಮೊಳಗಿಸಿದರು. ಒಂದು ನೋಟಿಸ್ ಸಹ ನೀಡದೆ ಏಕಾಏಕಿ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವುದು ಅಹಿಂದ ವರ್ಗದ ಮಾಸ್ ಲೀಡರ್‌ಗೆ ಹಾಗೂ ಆಹಿಂದ ವರ್ಗಕ್ಕೆ ಮಾಡಿದ ಅನ್ಯಾಯ ಎಂದು ಹೈಕಮಾಂಡ್ ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿದರು. ಕೂಡಲೇ ವಜಾ ಆದೇಶವನ್ನು ವಾಪಸ್ ಪಡೆಯುವಂತೆ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.ತುಮಕೂರಲ್ಲಿಂದು ಬೃಹತ್ ಪ್ರತಿಭಟನೆ:ಈ ಮಧ್ಯೆ, ಕೆ.ಎನ್.ರಾಜಣ್ಣ ಅವರ ವಜಾ ಖಂಡಿಸಿ ತುಮಕೂರಿನಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಲು ಅವರ ಅಭಿಮಾನಿಗಳು, ಹಿಂದುಳಿದ ವರ್ಗಗಳ ನಾಯಕರು ನಿರ್ಧರಿಸಿದ್ದಾರೆ. ಜಿಲ್ಲೆಯಾದ್ಯಂತದ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಅಭಿಮಾನಿಗಳು ನಗರದ ಬಿಜಿಎಸ್ ವೃತ್ತದಲ್ಲಿ ಸಮಾವೇಶಗೊಂಡು, ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ನಂತರ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.----
ಬಾಕ್ಸ್:ಪೆಟ್ರೋಲ್ ಸುರಿದುಕೊಂಡು,ವಿಷ ಸೇವಿಸಿದ ಅಭಿಮಾನಿಬಳಿಕ, ನಗರದ ಡೂಮ್ ಲೈಟ್ ಸರ್ಕಲ್ ನಿಂದ ಪ್ರತಿಭಟನಾ ರ್‍ಯಾಲಿ ಆರಂಭವಾಯಿತು. ಸುಮಾರು ಐದು ಕಿಲೋ ಮೀಟರ್ ವರೆಗೂ ಪ್ರತಿಭಟನಾ ರ್‍ಯಾಲಿ ಸಾಗಿತು. ಪ್ರತಿಭಟನೆ ವೇಳೆ ಒಂದು ಹಂತದಲ್ಲಿ ರಾಜಣ್ಣ ಬೆಂಬಲಿಗರ ಆಕ್ರೋಶ ಕಟ್ಟೆಯೊಡೆದು ತಾರಕಕ್ಕೇರಿತು. ನಗರದ ಪೆಟ್ರೋಲ್ ಬಂಕ್ ಸರ್ಕಲ್ ಬಳಿ ಪ್ರತಿಭಟನಾ ಮೆರವಣಿಗೆ ಸಾಗುತ್ತಿದ್ದ ವೇಳೆ ರಾಜಣ್ಣ ಅವರ ಅಭಿಮಾನಿ ಶಿವಲಿಂಗ ಎಂಬಾತ ತನ್ನ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ. ಈ ವೇಳೆ, ಪೊಲೀಸರು ಮಧ್ಯಪ್ರವೇಶಿಸಿ, ಹೆಚ್ಚಿನ ಅನಾಹುತ ತಪ್ಪಿಸಿದರು. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಇದೇ ವೇಳೆ, ರಂಗನಾಥ್ ಎಂಬ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ. ತಕ್ಷಣವೇ ಆತನನ್ನು ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.