ಮುಂಡರಗಿ ಸಂಸ್ಥಾನಮಠದ ಪೀಠಾಧಿಪತಿ ಜ.ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳವರಿಗೆ ರಾಜ್ಯ ಸರ್ಕಾರದ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನ. 28ರಂದು ಸಂಜೆ 4 ಗಂಟೆಗೆ ಮುಂಡರಗಿಯ ಶ್ರೀ ಜಗದ್ಗುರು ಅನ್ನದಾನೀಶ್ವರ ಕಾಲೇಜು ಆವರಣದಲ್ಲಿ ಅದ್ಧೂರಿಯಾಗಿ ಪ್ರದಾನ ಮಾಡಲಾಗುವುದು.
ಸುದ್ದಿಗೋಷ್ಠಿಯಲ್ಲಿ ಜೆ.ಅ.ವಿದ್ಯಾ ಸಮಿತಿ ಆಡಳಿತಾಧಿಕಾರಿ
ಕನ್ನಡಪ್ರಭ ವಾರ್ತೆ ಮುಂಡರಗಿಮುಂಡರಗಿ ಸಂಸ್ಥಾನಮಠದ ಪೀಠಾಧಿಪತಿ ಜ.ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳವರಿಗೆ ರಾಜ್ಯ ಸರ್ಕಾರದ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನ. 28ರಂದು ಸಂಜೆ 4 ಗಂಟೆಗೆ ಮುಂಡರಗಿಯ ಶ್ರೀ ಜಗದ್ಗುರು ಅನ್ನದಾನೀಶ್ವರ ಕಾಲೇಜು ಆವರಣದಲ್ಲಿ ಅದ್ಧೂರಿಯಾಗಿ ಪ್ರದಾನ ಮಾಡಲಾಗುವುದು ಎಂದು ಜೆ.ಅ.ವಿದ್ಯಾ ಸಮಿತಿ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ ಹೇಳಿದರು.
ಈ ಕುರಿತು ಬುಧವಾರ ಕಾಲೇಜಿನ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ, ತಾಲೂಕು ಆಡಳಿತ, ತಾಪಂ, ಪುರಸಭೆ, ಹಿರಿಯ ನಾಗರಿಕ ವೇದಿಕೆ ಮುಂಡರಗಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಈ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಕಾರಣಾಂತರಗಳಿಂದ ನ. 1ರಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಶ್ರೀಗಳಿಗೆ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಶ್ರೀಗಳ ಸಾಹಿತ್ಯ ಹಾಗೂ ಸಮಾಜ ಸುಧಾರಣಾ ಸೇವೆಯನ್ನು ಪರಿಗಣಿಸಿ, ಮುಂಡರಗಿಯಲ್ಲೇ ವಿಶೇಷ ಹಾಗೂ ಅದ್ಧೂರಿ ಕಾರ್ಯಕ್ರಮದ ಮೂಲಕ ಪ್ರದಾನ ಮಾಡುತ್ತಿರುವುದು ನಮಗೆಲ್ಲ ಹೆಮ್ಮೆತಂದಿದೆ.
28ರ ಸಂಜೆ 4 ಗಂಟೆಗೆ ಶ್ರೀಮಠದಿಂದ ಪೂಜ್ಯರ ಭವ್ಯ ಸಾರೋಟ ಮೆರವಣಿಗೆ ಪ್ರಾರಂಭವಾಗಲಿದೆ. ಅಂಬಾಭವಾನಿ ದೇವಸ್ಥಾನ ರಸ್ತೆ, ಹೊಸ ಬಸ್ ನಿಲ್ದಾಣ, ಕೆನರಾ ಬ್ಯಾಂಕ್ ರಸ್ತೆ ಮೂಲಕ ಸಾಗಿ ಅನ್ನದಾನೀಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು ಮೈದಾನವನ್ನು ತಲುಪಲಿದೆ.ಮೆರವಣಿಗೆಯಲ್ಲಿ ಡೊಳ್ಳು, ಕೋಲಾಟ ಸೇರಿದಂತೆ ಸುಮಾರು 10 ಜಾನಪದ ಕಲಾ ತಂಡಗಳು, 125 ಮಹಿಳೆಯರ ಕುಂಭಮೇಳ ಮತ್ತು ನಮ್ಮ ಜ.ಅ.ವಿದ್ಯಾ ಸಮೀತಿ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾವಿರಾರು ಭಕ್ತರು ಪಾಲ್ಗೊಂಡು ಮೆರವಣಿಗೆಗೆ ಮೆರುಗು ನೀಡಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲಿರುವ ಜ.ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳವರು ಸಾನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಸಮಾರಂಭ ಉದ್ಘಾಟಿಸಲಿದ್ದು, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸಭಾಪತಿ ಸಲೀಂ ಅಹ್ಮದ್, ಸಭಾಧ್ಯಕ್ಷ ಜಿ.ಎಸ್. ಪಾಟೀಲ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ, ಪಿ.ಸಿ. ಗದ್ದಿಗೌಡರ, ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಶಾಸಕರಾದ ಡಾ. ಎಚ್.ಕೆ. ಪಾಟೀಲ, ಸಿ.ಸಿ. ಪಾಟೀಲ, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮತ್ತು ಡಿ.ಡಿ. ಮೋರನಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ ಸೇರಿದಂತೆ ಅನೇಕರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಎಸ್.ಬಿ. ಹಿರೇಮಠ, ವೀರನಗೌಡ ಗುಡದಪ್ಪನವರ, ಮಂಜುನಾಥ ಇಟಗಿ ಸೇರಿದಂತೆ ಅನೇಕರಿದ್ದರು.