ಸಾರಾಂಶ
ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆ ಅಂತಿಮ ಹಂತಕ್ಕೆ ತಲುಪಿದ್ದು ಬುಧವಾರ ಬಹುತೇಕ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಗುರುವಾರ ಅಂತಿಮ ಪಟ್ಟಿ ಪ್ರಕಟವಾಗುವ ಸಂಭವವಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆ ಅಂತಿಮ ಹಂತಕ್ಕೆ ತಲುಪಿದ್ದು ಬುಧವಾರ ಬಹುತೇಕ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಗುರುವಾರ ಅಂತಿಮ ಪಟ್ಟಿ ಪ್ರಕಟವಾಗುವ ಸಂಭವವಿದೆ.ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ 2ನೇ ಹಂತದ ಸಭೆ ನಡೆದಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೇರಿ ಸಮಿತಿ ಸದಸ್ಯರು, ಎಲ್ಲ ಅಕಾಡೆಮಿ, ಪ್ರಾಧಿಕಾರದ ಅಧ್ಯಕ್ಷರುಗಳು ಪಾಲ್ಗೊಂಡಿದ್ದರು.
ಈಗಾಗಲೇ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಗಳು 1:3 ಅನುಪಾತದಲ್ಲಿ ರಂಗಭೂಮಿ, ಮಾಧ್ಯಮ, ಯಕ್ಷಗಾನ, ಚಿತ್ರಕಲೆ, ಸಂಕಿರಣ, ಸಾಹಿತ್ಯ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳ 179 ಮಂದಿ ಸಂಭವನೀಯರ ಪಟ್ಟಿ ಸಿದ್ಧಪಡಿಸಿತ್ತು. ಈ ಸಂಭವನೀಯರ ಪಟ್ಟಿಯನ್ನು ಸಚಿವ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ 1:2 ಅನುಪಾತಕ್ಕೆ ಇಳಿಸಿದ್ದು, 130ರಿಂದ 140 ಮಂದಿಯ ಪಟ್ಟಿ ಮಾಡಲಾಗಿತ್ತು.ಸಭೆಯಲ್ಲಿ ಉಪ ಸಮಿತಿಗಳು ಸಿದ್ಧಪಡಿಸಿದ್ದ ಸಂಭವನೀಯರ ಪಟ್ಟಿ ಪರಿಶೀಲಿಸಲಾಯಿತು. ಸಭೆಯಲ್ಲಿ ಹಲವು ಸುತ್ತಿನ ಚರ್ಚೆ ಬಳಿಕ ಮುಖ್ಯಮಂತ್ರಿಯವರ ಸಮಕ್ಷಮದಲ್ಲಿ ಸಂಭವನೀಯರ ಅಂತಿಮ ಪಟ್ಟಿ ಸಿದ್ಧಪಡಿಸಲು ನಿರ್ಧರಿಸಲಾಗಿದೆ. ಗುರುವಾರ ಅಂತಿಮ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿ ಮತ್ತಿತರರು ಇದ್ದರು.;Resize=(128,128))
;Resize=(128,128))