ಸಾರಾಂಶ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಕ್ಷೇಮ ಸಮಾಚಾರ ವಿಚಾರಿಸಿದರು.
ಶಾಲಾ ಮುಖ್ಯೋಪಾಧ್ಯಾಯರು, ಸಿಆರ್‌ಪಿ ವಿರುದ್ಧ ಶಿಸ್ತುಕ್ರಮಕ್ಕೆ ಸೂಚನೆ
ಕನ್ನಡಪ್ರಭ ವಾರ್ತೆ ಕೊಪ್ಪಳಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಕ್ಷೇಮ ಸಮಾಚಾರ ವಿಚಾರಿಸಿದರು.
ಜಿಲ್ಲಾ ಕ್ರೀಡಾಂಗಣ ಕೊಪ್ಪಳದಿಂದ ಗುಳದಹಳ್ಳಿ ಗ್ರಾಮದ ವಿದ್ಯಾರ್ಥಿಗಳು ತಮ್ಮ ಮನೆಗಳಿಗೆ ಸ್ಥಳೀಯ ಗೂಡ್ಸ್ ಟಾಟಾ ಏಸ್ ವಾಹನದಲ್ಲಿ ತೆರಳುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿತ್ತು. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ರಾಮತ್ನಾಳ, ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿ, ಮಕ್ಕಳಿಗೆ ಹಾಗೂ ಪೋಷಕರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮ ಅಥವಾ ಸಭೆ-ಸಮಾರಂಭಗಳಿಗೆ ವಿದ್ಯಾರ್ಥಿಗಳನ್ನು ಗೂಡ್ಸ್ ವಾಹನದಲ್ಲಿ ಕರೆದುಕೊಂಡು ಹೋಗದಂತೆ ಸೂಚಿಸಲಾಗಿತ್ತು. ಶಿಕ್ಷಣ ಇಲಾಖೆ ಆಯುಕ್ತರು ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ. ಅಲ್ಲದೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಈ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಸ್ವತಃ ನಾನೇ ಸೂಚಿಸಿದ್ದೆ. ಜಿಲ್ಲಾಧಿಕಾರಿ, ಶಿಕ್ಷಣ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯವರೊಂದಿಗೆ ನಡೆಸಿದ ಸಭೆಯಲ್ಲಿಯೂ ಈ ಕುರಿತು ಕ್ರಮವಹಿಸುವಂತೆ ಸೂಚಿಸಲಾಗಿತ್ತು. ಆದರೆ ಗುಳದಹಳ್ಳಿ ಶಾಲಾ ಶಿಕ್ಷಕರು ತೀವ್ರ ನಿಷ್ಕಾಳಜಿ ತೋರಿದ್ದಾರೆ. ಸುಮಾರು 42 ಮಕ್ಕಳನ್ನು ಸ್ಥಳೀಯ ಗೂಡ್ಸ್ ವಾಹನದಲ್ಲಿ ಕ್ರೀಡಾಕೂಟಕ್ಕೆ ಕರೆ ತಂದು ಇಂತಹ ಅವಘಡವಾಗಲು ಕಾರಣೀಭೂತರಾಗಿದ್ದಾರೆ. ಕರ್ತವ್ಯ ಲೋಪವೆಸಗಿರುವ ಗುಳದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು, ಸಮೂಹ ಸಂಪನ್ಮೂಲ ವ್ಯಕ್ತಿ ಹಾಗೂ ಬ್ಲಾಕ್ ಹಂತದ ಅಧಿಕಾರಿಗಳ ವಿರುದ್ಧ ಇಲಾಖಾ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಅಲ್ಲಿ ಕೆಲವು ಶಾಲೆಗಳಿಂದ ಮಕ್ಕಳನ್ನು ಗೂಡ್ಸ್ ವಾಹನದಲ್ಲಿ ಕರೆ ತಂದಿರುವುದನ್ನು ಕಂಡುಬಂದಿದೆ. ಆಯೋಜಕರಿಗೆ, ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಮತ್ತು ವಾಹನ ಚಾಲಕರಿಗೆ ಎಚ್ಚರಿಕೆ ನೀಡಿ, ಗೂಡ್ಸ್ ವಾಹನಗಳ ಬದಲಾಗಿ ಸಾರಿಗೆ ವಾಹನದಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವಂತೆ ಸೂಚಿಸಿದರು.
ಮಕ್ಕಳ ರಕ್ಷಣಾಧಿಕಾರಿ ಮಹಾಂತ ಸ್ವಾಮಿ ಪೂಜಾರ, ಡಿಡಿಪಿಐ ಶ್ರೀಶೈಲ ಬಿರಾದಾರ, ಬಿಇಒ ಶಂಕರಯ್ಯ ಇದ್ದರು.