ಸಾರಾಂಶ
ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ.) ಮತ್ತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಇದೀಗ ಕರ್ನಾಟಕ ಭೂ ಕಬಳಿಕೆ ನಿಗ್ರಹ ವಿಶೇಷ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.
ಬೆಂಗಳೂರು : ರಾಜ್ಯ ಅರಣ್ಯ ಇಲಾಖೆಯ ₹150 ಕೋಟಿಗಿಂತ ಅಧಿಕ ಮೌಲ್ಯದ ಸ್ವತ್ತನ್ನು ಕಾನೂನುಬಾಹಿರವಾಗಿ ಸ್ವಾಧೀನದಲ್ಲಿರಿಸಿಕೊಂಡಿರುವ ಆರೋಪದಡಿ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ.) ಮತ್ತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಇದೀಗ ಕರ್ನಾಟಕ ಭೂ ಕಬಳಿಕೆ ನಿಗ್ರಹ ವಿಶೇಷ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.
ಸೋಮವಾರ ನ್ಯಾಯಾಲಯಕ್ಕೆ ದೂರು ನೀಡಿದ ರಮೇಶ್, ಕಾನೂನು ಬಾಹಿರವಾಗಿ ಕಳೆದ 14 ವರ್ಷಗಳಿಂದ ತಮ್ಮ ಸ್ವಾಧೀನದಲ್ಲಿಟ್ಟುಕೊಂಡು ಆ ಸ್ವತ್ತಿ ಮೂಲಕ ಪ್ರತೀ ವರ್ಷ ಕೋಟ್ಯಂತರ ರುಪಾಯಿ ಆದಾಯ ಗಳಿಸಲಾಗುತ್ತಿದೆ ಎಂದು ಆರೋಪಿಸಿ, ಸ್ಯಾಮ್ ಪಿತ್ರೋಡಾ ಸೇರಿದಂತೆ ಐಎಎಸ್ ಮತ್ತು ಐಎಫ್‌ಎಸ್ ವಿರುದ್ಧವೂ ಆರೋಪ ಮಾಡಲಾಗಿದೆ.
ನಗರದ ಯಲಹಂಕ ಬಳಿಯ ಜಾರಕಬಂಡೆ ಮೀಸಲು ಅರಣ್ಯ ಪ್ರದೇಶದಲ್ಲಿ 12.35 ಎಕರೆ ಜಮೀನನ್ನು ಪಿತ್ರೋಡಾ ಅವರಿಗೆ 2001ರಲ್ಲಿ ಗುತ್ತಿಗೆ ನೀಡಲಾಗಿತ್ತು. ಔಷಧೀಯ ಗಿಡಮೂಲಿಕೆಗಳನ್ನು ಬೆಳೆಸುವ ಉದ್ದೇಶದಿಂದ ಅಂದಿನ ಸರ್ಕಾರ 10 ವರ್ಷಗಳ ಅವಧಿಗೆ ಈ ಜಮೀನನ್ನು ಗುತ್ತಿಗೆಗೆ ನೀಡಿತ್ತು. 2011ರಲ್ಲಿ ಗುತ್ತಿಗೆ ಅವಧಿ ಮುಕ್ತಾಯಗೊಂಡರೂ ಪಿತ್ರೋಡಾ ಅವರು ಜಮೀನನ್ನು ತಮ್ಮ ವಶದಲ್ಲೇ ಇಟ್ಟುಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಜಮೀನಿನಲ್ಲಿ ಬೆಳೆದ ಗಿಡಮೂಲಿಕೆಗಳಿಂದ ಪಿತ್ರೋಡಾ ಅವರಿಗೆ ವಾರ್ಷಿಕ ಕೋಟ್ಯಂತರ ರು. ಆದಾಯ ಬರುತ್ತಿದೆ. ಕಳೆದ 15 ವರ್ಷಗಳಿಂದ ಮೀಸಲು ಅರಣ್ಯ ಪ್ರದೇಶವನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ ಮತ್ತು ಈ ಜಮೀನಿನ ಪ್ರಸ್ತುತ ಮಾರುಕಟ್ಟೆ ಮೌಲ್ಯ ₹400 ಕೋಟಿಗಿಂತ ಹೆಚ್ಚಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.