ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರದ ರಾಮತೀರ್ಥನಗರದಲ್ಲಿ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಮಂಗಳವಾರ ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕರ ವಸತಿ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಹಾಸ್ಟೆಲ್ ಮುಂಭಾಗದಲ್ಲಿ ಇಲಾಖೆಗೆ ಸೇರಿದ ಜಾಗ ಕೇವಲ 9 ಅಡಿ ಮಾತ್ರ ಇದೆ. ಆದರೆ, ರಸ್ತೆಯವರೆಗಿನ ಜಾಗವನ್ನು ಅತಿಕ್ರಮಿಸಿ ಗಾರ್ಡನ್ ನಿರ್ಮಿಸಲಾಗುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ. ಬುಡಾ ಇಲಾಖೆಗೆ ಸೇರಿದ ಸಿ.ಎ ನಿವೇಶನವನ್ನು ಅಲ್ಪಸಂಖ್ಯಾತ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಅತಿಕ್ರಮಣ ಕುರಿತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಿವಾಸಿಗಳು, ತಕ್ಷಣ ಅತಿಕ್ರಮಣ ತೆರವುಗೊಳಿಸುವಂತೆ ಒತ್ತಾಯಿಸಿದರು. ಅತಿಕ್ರಮಣ ನಡೆದಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಸಂಬಂಧಪಟ್ಟವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ ಬುಡಾ ಅಧಿಕಾರಿಗಳನ್ನು ನಿವಾಸಿಗಳು ತರಾಟೆಗೆ ತೆಗೆದುಕೊಂಡರು. ಸರ್ಕಾರಿ ಜಾಗ ಉಳಿಸುವಲ್ಲಿ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಈ ವೇಳೆ ಮರಗೇದ್ರಗೌಡ ಪಾಟಿಲ, ಮಾಹಾತೇಂಶ ವಕ್ಕುಂದ ಸೇರಿದಂತೆ ಸ್ಥಳಿಯ ನಿವಾಸಿಗಳು ಇದ್ದರು.