ರಾಮನಗರ: ಬೆಳಗಾವಿ ಜಿಲ್ಲೆಯ ಕಾಕತಿ ಗ್ರಾಮದಲ್ಲಿ ಜನಿಸಿದ ವೀರಮಾತೆ ಕಿತ್ತೂರು ರಾಣಿ ಚನ್ನಮ್ಮ ಅವರು ಬ್ರಿಟಿಷರ ವಿರುದ್ಧ ಧೈರ್ಯದಿಂದ ಹೋರಾಡಿದ ವೀರ ಮಹಿಳೆಯಾಗಿದ್ದು, ಅವರ ದೇಶಪ್ರೇಮ ಸಾಹಸ ಮತ್ತು ಸ್ವಾಭಿಮಾನ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗಯ್ಯ ತಿಳಿಸಿದರು

ರಾಮನಗರ: ಬೆಳಗಾವಿ ಜಿಲ್ಲೆಯ ಕಾಕತಿ ಗ್ರಾಮದಲ್ಲಿ ಜನಿಸಿದ ವೀರಮಾತೆ ಕಿತ್ತೂರು ರಾಣಿ ಚನ್ನಮ್ಮ ಅವರು ಬ್ರಿಟಿಷರ ವಿರುದ್ಧ ಧೈರ್ಯದಿಂದ ಹೋರಾಡಿದ ವೀರ ಮಹಿಳೆಯಾಗಿದ್ದು, ಅವರ ದೇಶಪ್ರೇಮ ಸಾಹಸ ಮತ್ತು ಸ್ವಾಭಿಮಾನ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗಯ್ಯ ತಿಳಿಸಿದರು.

ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ವೀರಮಾತೆ ಕಿತ್ತೂರು ರಾಣಿ ಚನ್ನಮ್ಮ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳು ಚನ್ನಮ್ಮ ಅವರಂತೆ ಧೈರ್ಯ, ಸಾಹಸ ಹಾಗೂ ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು. ಚನ್ನಮ್ಮನ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು, ದೇಶಕ್ಕೆ ಮಾದರಿಯಾಗುವಂತೆ ಬದುಕಬೇಕು. ಮಹಿಳೆಯರು ಹೆಚ್ಚಿನ ಸಾಧನೆ ಮಾಡುವುದರ ಜೊತೆಗೆ ದೇಶವನ್ನು ಮುನ್ನಡೆಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.

ಡಯಟ್ ಶಿಕ್ಷಣಾಧಿಕಾರಿ ಶೈಲಜಾ ಮಾತನಾಡಿ, ಕಿತ್ತೂರಾಣಿ ಚನ್ನಮ್ಮ ಅವರ ಜೀವನ ಮತ್ತು ಹೋರಾಟ ಮಹಿಳೆಯರಿಗೆ ಸ್ಫೂರ್ತಿದಾಯಕವಾಗಿದೆ. ಹೆಣ್ಣುಮಕ್ಕಳು ಶಿಕ್ಷಣ ಪಡೆಯುವುದರ ಜೊತೆಗೆ ಕಲಿತ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜ ಶಾಲೆ ಹಾಗೂ ತಮ್ಮ ಗ್ರಾಮಗಳ ಅಭಿವೃದ್ಧಿಗೆ ಕೊಡುಗೆ ನೀಡುವ ಮೂಲಕ ಆದರ್ಶ ವ್ಯಕ್ತಿಗಳಾಗಬೇಕು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಮಾತನಾಡಿ, ಬಾಲಕಿಯರ ಶಾಲೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮುಂದಿನ ಪೀಳಿಗೆಯ ಹೆಣ್ಣುಮಕ್ಕಳಲ್ಲಿ ಧೈರ್ಯ, ಪ್ರತಿಭೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಲು ಸಾಧ್ಯವಾಗುತ್ತದೆ. ಕತ್ತಿವರಸೆ, ಕುದುರೆ ಸವಾರಿ, ಕ್ರೀಡೆ ಹಾಗೂ ಸಂಗೀತದಂತಹ ಕ್ಷೇತ್ರಗಳಲ್ಲಿ ನಿರಂತರ ಅಭ್ಯಾಸದಿಂದ ಯಶಸ್ಸು ಸಾಧಿಸಬಹುದು ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರು ತಂದೆ-ತಾಯಿಯನ್ನು ಗೌರವಿಸಿ ಉತ್ತಮ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಕ್ಷಣಿಕ ಸುಖಕ್ಕೆ ಜೀವನವನ್ನು ಹಾಳುಮಾಡಿಕೊಳ್ಳದೆ ಹಿರಿಯರು ಹೇಳುವ ಬುದ್ಧಿ ಮಾತುಗಳನ್ನು ಅರ್ಥಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ದಕ್ಷಿಣ ಕೊರಿಯಾದಲ್ಲಿ ನಡೆದ ಟೇಕ್ವಾಂಡೋ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಚಿನ್ನದ ಪದಕಗಳನ್ನು ಗಳಿಸಿ ಜಿಲ್ಲೆಗೆ ಕೀರ್ತಿ ತಂದ ಇಂದು ಶ್ರೀ, ಪೂರ್ವಿಕ, ಫಿರ್ದೋಸ್ ಸುಲ್ತಾನ್, ಸಾನ್ವಿ ಸತೀಶ್ ಹಾಗೂ ವಂಶಿ ಅವರನ್ನು ಸನ್ಮಾನಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ದಿನೇಶ್, ಕೃಷಿ ಇಲಾಖೆಯ ಕೇಶವ್, ಶಾಲೆಯ ಉಪಾಧ್ಯಾಯರಾದ ಶಿವಸ್ವಾಮಿ ಹಾಗೂ ಮುನಿಯಪ್ಪ ಉಪಸ್ಥಿತರಿದ್ದರು.

30ಕೆಆರ್ ಎಂಎನ್ 2.ಜೆಪಿಜಿ

ರಾಮನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ವೀರಮಾತೆ ಕಿತ್ತೂರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.