ರಾಣಿ ಚೆನ್ನಮ್ಮ ಶಕ್ತಿಯಾಗಿ ಮಹಿಳೆಯರಿಗೆ ಸ್ಫೂರ್ತಿ: ಕೋಟ

| Published : Oct 24 2025, 01:00 AM IST

ಸಾರಾಂಶ

ರಜತಾದ್ರಿಯ ಜಿಲ್ಲಾಧಿಕಾರಿಯಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿರಾಷ್ಟ್ರ ಭಕ್ತಿ, ಶೌರ್ಯ, ಶ್ರದ್ಧೆ, ಹೋರಾಟಕ್ಕೆ ಮತ್ತೊಂದು ಹೆಸರೇ ಕಿತ್ತೂರು ರಾಣಿ ಚೆನ್ನಮ್ಮ ಎನ್ನುವುದೇ ನಮ್ಮೆಲ್ಲರ ಹೆಮ್ಮೆ. ಬೆಳಗಾವಿ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಕಿತ್ತೂರು ರಾಣಿ ಚೆನ್ನಮ್ಮ, ರಾಷ್ಟ್ರದ ಗೌರವವನ್ನು ಕಾಪಾಡುವುದಕ್ಕಾಗಿ ತಮ್ಮ ಬದುಕನ್ನು ಸಮರ್ಪಣೆ ಮಾಡಿದರು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿಯಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಚೆನ್ನಮ್ಮ, ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಏಕಾಂಗಿಯಾಗಿ ಹೋರಾಡಿ ಸಂಘಟನಾ ಶಕ್ತಿಯನ್ನು ಬೆಳೆಸಿ, ಭಾರತದ ಸ್ವಾತಂತ್ರ್ಯ ಹೋರಾಟದ ಪ್ರಥಮ ಮಹಿಳೆಯಾಗಿ, ವ್ಯಕ್ತಿಯಾಗಿ, ಶಕ್ತಿಯಾಗಿ, ಮಹಿಳೆಯರಿಗೆ ಸ್ಫೂರ್ತಿಯಾದರು ಎಂದರು.

ಶಾಸಕ ಯಶ್ಪಾಲ್ ಎ. ಸುವರ್ಣ ಅಧ್ಯಕ್ಷತೆ ವಹಿಸಿ, ದೇಶ ಕಟ್ಟುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ ಕಿತ್ತೂರು ರಾಣಿ ಚೆನ್ನಮ್ಮ ವಿಚಾರ ಹಾಗೂ ಬದುಕಿದ ರೀತಿ ಅವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯವಾಗಬೇಕು ಎಂದು ಹೇಳಿದರು.

ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿರಂಜನ್ ಯು.ಸಿ., ಕಿತ್ತೂರು ರಾಣಿ ಚೆನ್ನಮ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಅಧ್ಯಕ್ಷ ಸಿದ್ದಬಸಯ್ಯ ಚಿಕ್ಕಮಠ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಲಾಖೆಯ ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ, ವಂದಿಸಿದರು.