13 ರಂದು ರಾಷ್ಟ್ರೀಯ ಲೋಕ ಅದಾಲತ್: ಬಸವರಾಜ

| Published : Jul 05 2024, 12:52 AM IST

13 ರಂದು ರಾಷ್ಟ್ರೀಯ ಲೋಕ ಅದಾಲತ್: ಬಸವರಾಜ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು

ಗದಗ: ಜಿಲ್ಲೆಯಲ್ಲಿ ಜು.13 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಹೇಳಿದರು.

ಅವರು ನಗರದ ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಪರನ್ಸ್‌ ಹಾಲ್‍ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು ಮತ್ತು ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 16 ಬೆಂಚ್‌ ರಚಿಸಿದ್ದು, ಗದಗ ಜಿಲ್ಲೆಯಲ್ಲಿ ಒಟ್ಟು 20130 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 4297 ಪ್ರಕರಣ ಗುರುತಿಸಿದ್ದು, ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‍ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣ ರಾಜೀಗಾಗಿ ಗುರುತಿಸಲಾಗಿರುತ್ತದೆ ಎಂದು ತಿಳಿಸಿದರು.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಈಗಾಗಲೇ ಸಂಬಂಧಪಟ್ಟ ಇಲಾಖೆಯ ಹಾಗೂ ನಿಗಮ ಮಂಡಳಿಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ ಹೆಚ್ಚಿನ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಲು ತಿಳಿಯಪಡಿಸಿದೆ. ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳು ಜು.13 ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಲು ಸುವರ್ಣಾವಕಾಶವಾಗಿದೆ ಎಂದರು.

ಜಿಲ್ಲೆಗೆ ಸಂಬಂಧಿಸಿದ ಅಪಘಾತ ಪರಿಹಾರ, ಜೀವನಾಂಶ, ಚೆಕ್ ಬೌನ್ಸ್ ಸೇರಿದಂತೆ ಇತರೆ ಒಟ್ಟು 14 ಪ್ರಕರಣಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಇವೆ. ಇವುಗಳನ್ನು ಸಹ ಲೋಕ ಅದಾಲತ್‍ನಲ್ಲಿ ರಾಜೀಗೆ ಪರಿಗಣಿಸಲಾಗಿದೆ. ಕಳೆದ ಮಾರ್ಚ-2024 ರಂದು ಜರುಗಿದ ಲೋಕ ಅದಾಲತ್‍ನಲ್ಲಿ 2033 ಚಾಲ್ತಿ ಪ್ರಕರಣಗಳನ್ನು ಹಾಗೂ 21387 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 23420 ಪ್ರಕರಣಗಳ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 16 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ ಎಂದರು.

ತೆರಿಗೆ ಪಾವತಿ ಶೇ.5 ವಿನಾಯತಿ: ನಗರಸಭೆ ಹಾಗೂ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಜು. 31ರೊಳಗೆ ಪಾವತಿಸುವ ಮೂಲಕ ಶೇ.5 ರಷ್ಟು ವಿನಾಯತಿ ಪಡೆಯಬಹುದು ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಇದ್ದರು.