ಮಾ. 9ರಂದು ರಾಷ್ಟ್ರೀಯ ಲೋಕ ಅದಾಲತ್

| Published : Jan 22 2024, 02:18 AM IST

ಸಾರಾಂಶ

ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಮಾ.೯ರಂದು ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಶಿಗ್ಗಾಂವಿ

ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಮಾ.೯ರಂದು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಶಿಗ್ಗಾಂವಿಯ ಕಿರಿಯ ದಿವಾಣಿ ನ್ಯಾಯಾಧೀಶ ಸುರೇಶ ವಗ್ಗನವರ ಹೇಳಿದರು.

ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯದ ಪ್ರಕರಣ, ಬ್ಯಾಂಕ್ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಇತರೆ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು ವೈವಾಹಿಕ ಪ್ರಕರಣ ಮತ್ತು ಇತರೆ ಸಿವಿಲ್ ಪ್ರಕರಣಗಳು, ಜತೆಗೆ ಕರ್ನಾಟಕ ರಿಯಲ್ ಎಸ್ಟೇಟ್ ಗೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕ ವೇದಿಕೆಯ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧಿಕರಣ ಪ್ರಕರಣಗಳು, ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು ಮೋಟರ್ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು ವೈವಾಹಿಕ ಪ್ರಕರಣಗಳು, ವೇತನ ಮತ್ತು ಬತ್ತೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಕಂದಾಯ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ಲೋಕ ಅದಾಲತನಲ್ಲಿ ಉಭಯ ಪಕ್ಷಗಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುತ್ತದೆ ಎಂದರು.

ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ಇದರಲ್ಲಿ ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂವಿಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿಗಳು ಹಾಗೂ ವಿವಿಧ ಬ್ಯಾಂಕಿನ ವ್ಯವಸ್ಥಾಪಕರು ಉಪಸ್ಥಿತರಿದ್ದರು.