ಮಾ.16 ರಂದು ನಾಯಕನಹಟ್ಟಿ ತಿಪ್ಪೇಶನ ರಥೋತ್ಸವ

| Published : Feb 18 2025, 12:30 AM IST

ಸಾರಾಂಶ

ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆಯಲ್ಲಿ ಸಚಿವ ಡಿ.ಸುಧಾಕರ್ ಮಾತನಾಡಿದರು.

ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ । ಜಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆ ಕನ್ನಡಪ್ರಭ ವಾರ್ತೆ ನಾಯಕನಹಟ್ಟಿ

ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಮಾರ್ಚ್ 16 ರಂದು ನೆರವೇರಲಿದ್ದು ಭಕ್ತಾಧಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಲಲು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2025ನೇ ಸಾಲಿನ ಜಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಮಧ್ಯ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಾಯಕನಹಟ್ಟಿ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದೆ. ಶ್ರೀಗುರು ತಿಪ್ಪೇರುದ್ರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಗುರುತಿಪ್ಪೇ ರುದ್ರಸ್ವಾಮಿ ಜಾತ್ರಾ ಮಹೋತ್ಸವವು 2025ರ ಮಾರ್ಚ್ 9 ರಿಂದ ಮಾರ್ಚ್ 24 ರವರೆಗೆ ನಡೆಯಲಿದ್ದು, ದೊಡ್ಡ ರಥೋತ್ಸವವು ಮಾ.16ರಂದು ಭಾನುವಾರ ನಿಗಧಿಯಾಗಿದೆ. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮೂಲಸೌಲಭ್ಯಗಳ ಕೊರತೆ ಎದುರಾಗಬಾರದು. ಕುಡಿಯುವ ನೀರು, ರಸ್ತೆ, ಆರೋಗ್ಯ, ನೈರ್ಮಲ್ಯ ಸೇರಿದಂತೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮತನಾಡಿ, ನಾಯಕನಹಟ್ಟಿ ಜಾತ್ರಾ ಮಹೋತ್ಸವಕ್ಕೆ ಸುಮಾರು 3 ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ. ಜಾತ್ರೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಉಪಸಮಿತಿಗಳನ್ನು ರಚನೆ ಮಾಡಲಾಗುವುದು. ಕಳೆದ ವರ್ಷದ ಸಣ್ಣಪುಟ್ಟ ನ್ಯೂನತೆಗಳನ್ನು ಈ ಬಾರಿ ಸರಿಪಡಿಸಿಕೊಂಡು ಜಾತ್ರೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಕುಡಿಯುವ ನೀರು, ಆರೋಗ್ಯ, ನೈರ್ಮಲ್ಯ, ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ರಚನೆ ಮಾಡಲಾಗುವುದು ಎಂದು ಹೇಳಿದರು. ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಆರೋಗ್ಯ, ನೈರ್ಮಲೀಕರಣ ಸಮಿತಿ ರಚನೆ ಮಾಡಿ, ಜಾತ್ರೆಯಲ್ಲಿ ತಾತ್ಕಾಲಿಕ ಅರೋಗ್ಯ ಕೇಂದ್ರಗಳ ಸ್ಥಾಪನೆ, ಅಂಬ್ಯುಲೆನ್ಸ್, ಔಷಧೋಪಚಾರದ ವ್ಯವಸ್ಥೆ ಸೇರಿದಂತೆ ಸಾರ್ವಜನಿಕರ ಆರೋಗ್ಯ ಕಾಡಾಪಲು ತಾತ್ಕಾಲಿಕವಾಗಿ ವೈದ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ ಬಾರಿ ತೀವ್ರ ಬರ ಪರಿಸ್ಥಿತಿ ಇದ್ದ ಕಾರಣ, ಜಾತ್ರೆ ಸಂದರ್ಭದಲ್ಲಿ ಕರ ವಸೂಲಿ ಮಾಡದಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಈ ಬಾರಿಯ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆಯಲ್ಲಿ ಕರ ವಸೂಲಿಗೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳಲು ಸಮಿತಿ ರಚನೆ ಮಾಡಿ, ಸಮಿತಿ ನೀಡುವ ವರದಿಯ ಆಧಾರದಲ್ಲಿ ಕರವಸೂಲಿಗೆ ದರ ನಿಗದಿಪಡಿಸಿ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಟೇಶ್ ತಿಳಿಸಿದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಜಾತ್ರಾ ಮಹೋತ್ಸವದ ಅಂಗವಾಗಿ ನಾಯಕನಹಟ್ಟಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳ ಗುಂಡಿ ಮುಚ್ಚಿಸಿ, ರಸ್ತೆ ದುರಸ್ಥಿಗೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಚಳ್ಳಕೆರೆ ಕ್ಷೇತ್ರದ ಅನುದಾನದಲ್ಲಿ ರು.10 ಲಕ್ಷ ನಾಯಕನಹಟ್ಟಿ ಜಾತ್ರೆಗೆ ನೀಡಲಾಗುವುದು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು ಮಾತನಾಡಿ, ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ ಎದುರಾಗದಂತೆ ಸ್ನಾನಗೃಹ, ಕೂದಲು ತೆಗೆಸುವಿಕೆ ಸ್ಥಳದಲ್ಲಿ ಸ್ವಚ್ಛತೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಜಾತ್ರೆಗಳಲ್ಲಿ ಸರಗಳ್ಳತನ ಸಾಮಾನ್ಯವಾಗಿದ್ದು, ತಾತ್ಕಾಲಿಕವಾಗಿ ಸಿಸಿ ಟಿವಿ ಕ್ಯಾಮೆರಾ ವ್ಯವಸ್ಥೆ ಬದಲಾಗಿ ಶಾಶ್ವತವಾಗಿ ಸಿಸಿ ಟಿವಿ ಕ್ಯಾಮೆರಾ ವ್ಯವಸ್ಥೆ ಕಲ್ಪಿವುದು ಉತ್ತಮ ಎಂದು ಸಲಹೆ ನೀಡಿದರು. ನಾಯಕನಹಟ್ಟಿ ಪಪಂ ಅಧ್ಯಕ್ಷೆ ಮಂಜುಳಾ ಶ್ರೀಕಾಂತ್, ಉಪಾಧ್ಯಕ್ಷೆ ಸರ್ವಮಂಗಳಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ, ಮಾಜಿ ಅಧ್ಯಕ್ಷ ರವಿಶಂಕರ್, ಎಂವೈಟಿ ಸ್ವಾಮಿ ಇದ್ದರು.