ಮೃತ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುತ್ತಿರುವ ಕುರಿತು ಸಮಗ್ರ ಮಾಹಿತಿ ಪಡೆದು, ಜಮೆಯಾದ ಹಣವನ್ನು ಹಿಂದಕ್ಕೆ ಪಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಹಿಬೂಬ ಸಾಬ ಮುದ್ದಾಪುರ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಮಸ್ಕಿ
ಮೃತ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗುತ್ತಿರುವ ಕುರಿತು ಸಮಗ್ರ ಮಾಹಿತಿ ಪಡೆದು, ಜಮೆಯಾದ ಹಣವನ್ನು ಹಿಂದಕ್ಕೆ ಪಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಹಿಬೂಬ ಸಾಬ ಮುದ್ದಾಪುರ ಸೂಚನೆ ನೀಡಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಖಾತೆಗೆ ಜಮೆಯಾಗಿರುವ ಹಣದ ಸಂಪೂರ್ಣ ವಿವರ ಸಂಗ್ರಹಿಸಿ, ಸರ್ಕಾರಕ್ಕೆ ಹಣ ಹಿಂದಿರುಗಿಸುವ ಪ್ರಕ್ರಿಯೆ ಕೈಗೊಳ್ಳ ಬೇಕು ಎಂದರು.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬ್ಯಾಂಕ್ಗಳು ಯಾವುದೇ ಕಾರಣಕ್ಕೂ ಸಾಲದ ಬಾಕಿಗೆ ಕಡಿತಗೊಳಿಸಬಾರದು. ಒಂದು ವೇಳೆ ಫಲಾನುಭವಿಗಳ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಂಡರೆ ತಕ್ಷಣ ತಮ್ಮ ಗಮನಕ್ಕೆ ತರಬೇಕು. ಅಂತಹ ಬ್ಯಾಂಕ್ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ತಿಳಿಸಲಾ ಗುವುದು ಎಂದು ಎಚ್ಚರಿಸಿದರು.ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಕೆಲವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಕುರಿತು ದೂರುಗಳು ಬಂದಿವೆ. ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು. ಪಡಿತರ ಧಾನ್ಯಗಳನ್ನು ಪಡೆದು ಬೇರೆಯವರಿಗೆ ಮಾರಾಟ ಮಾಡಿರುವುದು ದೃಢಪಟ್ಟರೆ ಅಂತಹವರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುವುದು ಎಂದರು.
ಯೋಜನೆಗಳ ಅನುಷ್ಠಾನದಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಅಕ್ರಮಗಳಿಗೆ ಕಡಿವಾಣ ಹಾಕುವಲ್ಲಿ ನಿರ್ಲಕ್ಷ್ಯ ವಹಿಸಿದರೆ, ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ರೆಡ್ಡಿ, ಸಿಡಿಪಿಒ ನಾಗರತ್ನ, ಆಹಾರ ಇಲಾಖೆ ಹಾಗೂ ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
