ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಂಗಳೂರು ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಮಂಗಳೂರಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ

ಮಂಗಳೂರು: ಇತಿಹಾಸವನ್ನು ತಿಳಿದುಕೊಂಡವರು ಮಾತ್ರ ಇತಿಹಾಸ ಸೃಷ್ಟಿಸಬಲ್ಲರು ಎಂಬ ಅಂಬೇಡ್ಕರ್ ಅವರ ಮಾತಿನಂತೆ ಭವಿಷ್ಯದ ಮುಂದಿನ ದಿನಗಳಲ್ಲಿ ಇತಿಹಾಸವನ್ನು ಸೃಷ್ಟಿಸುವ ವ್ಯಕ್ತಿತ್ವವನ್ನು ಇಂದಿನ ಯುವಜನತೆ ರೂಪಿಸಿಕೊಳ್ಳಬೇಕು. ಸಂವಿಧಾನವನ್ನು ಅರ್ಥೈಸಿಕೊಂಡು ನಮ್ಮ ದೇಶಕ್ಕೆ ಮತ್ತು ಸಮಾಜಕ್ಕೆ ಪೂರಕವಾಗುವಂತ ಕೆಲಸ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಂಗಳೂರು ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮಾ ಗಾಂಧೀಜಿ ಅವರ ಪುಸ್ತಕಗಳನ್ನು ಹಾಗೂ ಸಂವಿಧಾನವನ್ನು ಅರ್ಥೈಸಿಕೊಳ್ಳಬೇಕು. ಸಂವಿಧಾನದಲ್ಲಿ ಬರೆದ ಪ್ರತಿಯೊಂದು ಚಿಂತನೆಗಳು ಅರ್ಥಪೂರ್ಣವಾಗಿದ್ದು, ಅದನ್ನು ಓದಿ ಉತ್ತಮ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಸಂವಿಧಾನಕ್ಕನುಗುಣವಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ನಮ್ಮ ದೇಶ ಬಲಿಷ್ಠವಾಗಲಿದೆ ಎಂದರು.

ದೇಶದ ಅತ್ಯಂತ ಕಟ್ಟ ಕಡೆಯ ವ್ಯಕ್ತಿ ಕೂಡ ಇಂದು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನಿರ್ಭಯದಿಂದ ಓಡಾಡಲು ಅಂಬೇಡ್ಕರ್ ಅವರ ರಚಿಸಿದ ಸಂವಿಧಾನವೇ ಕಾರಣ. ಸಂವಿಧಾನದ ವಿರುದ್ಧ ನಡೆದವರಿಗೆ ಮನವರಿಕೆ ಮಾಡಿ ಅವರನ್ನು ಸತ್ಪ್ರಜೆಗಳನ್ನಾಗಿಸುವುದು ಅಗತ್ಯವಾಗಿದೆ ಎಂದು ಸ್ಪೀಕರ್ ಹೇಳಿದರು.

ಉಪನ್ಯಾಸ ನೀಡಿದ ಗೋಕರ್ಣನಾಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ, ಸಂವಿಧಾನವು ಸಮಾಜದ ಭಯವನ್ನು ನಿವಾರಿಸಲು ಸೃಷ್ಟಿಯಾದ ಒಂದು ವ್ಯವಸ್ಥೆ ಎಂದು ಹೇಳಿದರು.ಯಾವುದೇ ಬಣ್ಣ, ಜಾತಿ, ಮತ, ಧರ್ಮ ಭೇದವಿಲ್ಲದೆ ಪ್ರತಿಯೊಬ್ಬರೂ ಸಮಾನ ರೀತಿಯಲ್ಲಿ ಇರುವ ಅವಕಾಶ ಕಲ್ಪಿಸಿರುವುದು ಸಂವಿಧಾನ. ಸಂವಿಧಾನ ಇಲ್ಲದ ಸಂದರ್ಭದಲ್ಲಿ ದೇಶ ಹೇಗಿತ್ತು ಮತ್ತು ಸಂವಿಧಾನ ಬಂದ ನಂತರ ದೇಶ ಹೇಗೆ ಬದಲಾಯಿತು ಎಂಬ ವಿಚಾರವನ್ನು ಯುವ ಜನತೆ ಅರಿತುಕೊಳ್ಳಬೇಕು ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಇದ್ದರು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ರಾಜು ಕೆ. ಸಂವಿಧಾನ ಪೀಠಿಕೆ ವಾಚಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ.ಬಿ.ಎಸ್. ಹೇಮಲತಾ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿದರು. ಪ್ರದೀಪ್ ಡಿ.ಎಂ. ಹಾವಂಜೆ ನಿರೂಪಿಸಿದರು.