ಬಂಟ್ವಾಳ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ನೆಪವನ್ನಾಗಿ ಮಾಡಿಕೊಂಡು ರಾಷ್ಟ್ರವಿರೋಧಿ ಶಕ್ತಿಗಳು ವಿದ್ಯಾರ್ಥಿಗಳ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ನೈಜ ವಿದ್ಯಾರ್ಥಿಗಳು ಇಂತಹ ಬೆಳವಣಿಗೆಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಭಾಕರ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟುಮಾಡುವುದು, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವುದು ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಘಟನೆಗಳು ನಡೆದಿರುವುದು ಖಂಡನೀಯ. ಇಂತಹ ಬೆಳವಣಿಗೆಗಳಿಂದ ರಾಷ್ಟ್ರಪ್ರೇಮಿ ವಿದ್ಯಾರ್ಥಿಗಳ ಗೌರವಕ್ಕೆ ಧಕ್ಕೆಯಾಗುತ್ತಿದ್ದು, ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.ದೇಶದ ಏಳಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಂತಾರಾಷ್ಟ್ರೀಯ ಜನಪ್ರಿಯತೆಯನ್ನು ಸಹಿಸಲಾಗದ ವಿದೇಶಿ ಶಕ್ತಿಗಳ ಪರೋಕ್ಷ ಪಾತ್ರವೂ ಇಂತಹ ಪ್ರತಿಭಟನೆಗಳ ಹಿಂದೆ ಇರಬಹುದು ಎಂದು ಅವರು ಆರೋಪಿಸಿದ್ದಾರೆ.ವಿದ್ಯಾರ್ಥಿ ಸಂಘಟನೆಗಳು ಹಾಗೂ ನೈಜ ವಿದ್ಯಾರ್ಥಿಗಳು ಇಂತಹ ಬೆಳವಣಿಗೆಗಳ ಬಗ್ಗೆ ಜಾಗೃತರಾಗಬೇಕು. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ರಾಷ್ಟ್ರೀಯ ಏಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.