ರಾಷ್ಟ್ರೀಯ ಪಕ್ಷಗಳಿಗೆ ಬಂಡಾಯದ ಬಿಸಿ

| Published : Oct 24 2024, 12:43 AM IST

ಸಾರಾಂಶ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎನ್.ವೆಂಕಣ್ಣ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ಹೆಚ್ಚುತ್ತಿದೆ. ಚುನಾವಣೆಯ ಪ್ರಕ್ರಿಯೆ ಜೋರಾಗಿರುವ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗಳಿಗೆ ಬಂಡಾಯದ ಬಿಸಿ ತಟ್ಟಿದೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎನ್.ವೆಂಕಣ್ಣ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೋಮಲಾಪುರದ ಟಿ.ಯರಿಸ್ವಾಮಿ ತಮಗೆ ಪಕ್ಷದ ಟಿಕೆಟ್ ಸಿಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಬುಧವಾರ ಹಲವು ಅಭಿಮಾನಿಗಳೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಿ ಹೊರ ಬಂದ ಟಿ.ಯರಿಸ್ವಾಮಿ ಪತ್ರಕರ್ತರೊಂದಿಗೆ ಮಾತನಾಡಿ, ನಾನು ೧೫ ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಬಿಜೆಪಿ ಎಸ್.ಟಿ. ಮೋರ್ಚಾದ ತಾಲೂಕು ಘಟಕದ ಉಪಾಧ್ಯಕ್ಷನಾಗಿ ಎರಡು ಬಾರಿ ಸೇವೆ ಸಲ್ಲಿಸಿದ್ದೇನೆ. ನನಗೆ ೨೦೨೩ರಲ್ಲಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು. ಆಗ ಟಿಕೆಟ್ ಕೈತಪ್ಪಿತು. ಉಪ ಚುನಾವಣೆಯಲ್ಲಿ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದೆ. ಈಗಲೂ ಟಿಕೆಟ್ ಕೈತಪ್ಪಿದೆ. ಸ್ಥಳೀಯರಿಗೆ ಟಿಕೆಟ್ ನೀಡಿಲ್ಲ. ಹಣಬಲ ಇದ್ದವರಿಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಎಂದರು.

ಎರಡೂ ರಾಜಕೀಯ ಪಕ್ಷಗಳಿಂದ ಬಂಡಾಯ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧೆ ಬಯಸಿ, ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿರುವುದು ಕುತೂಹಲ ಮೂಡಿಸಿದೆ. ಎರಡೂ ರಾಷ್ಟ್ರೀಯ ಪಕ್ಷಗಳ ಬಂಡಾಯ ಶಮನಕ್ಕೆ ಯಾವ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ? ಬಂಡಾಯ ಅಭ್ಯರ್ಥಿಗಳ ಸ್ಪರ್ಧೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತ ಟಿ.ಯರಿಸ್ವಾಮಿ ಬುಧವಾರ ತಮ್ಮ ಬೆಂಬಲಿಗರೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ತಾಲೂಕು ಕಚೇರಿಗೆ ಆಗಮಿಸುತ್ತಿರುವುದು.